ಸಮಾಜ ಕಲ್ಯಾಣ ಇಲಾಖೆಯ ಸೇವೆಗಳು ಸಕಾಲ ವ್ಯಾಪ್ತಿಗೆ: ಡಿಸಿಎಂ ಕಾರಜೋಳ ಚಾಲನೆ

ಸಮಾಜ ಕಲ್ಯಾಣ ಇಲಾಖೆಯ ಪ್ರಮುಖ 9 ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಸಕಾಲ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.
ಸಕಾಲ ಸೇವೆಗೆ ಚಾಲನೆ
ಸಕಾಲ ಸೇವೆಗೆ ಚಾಲನೆ
Updated on

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಪ್ರಮುಖ 9 ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಸಕಾಲ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಈ ಸೇವೆಗಳನ್ನು ಸಕಾಲ ಯೋಜನೆಗೆ ಒಳಪಡಿಸಲು ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸುಲಭ ಹಾಗೂ ಶೀಘ್ರವಾಗಿ ತಲುಪಿಸಬಹುದಾಗಿದೆ. ಈ ಸದುದ್ದೇಶದಿಂದ ಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹಧನ, ದೌರ್ಜನ್ಯ ಸಂತ್ರಸ್ತರಿಗೆ ಪರಿಹಾರ, ಯುಪಿಎಸ್‍ಸಿ, ಕೆಎಎಸ್ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ, ಸಾಗರೋತ್ತರ ವಿದ್ಯಾರ್ಥಿ ವೇತನ ನೀಡುವ, ಪ್ರಬುದ್ಧ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಯೋಜನೆಗಳನ್ನು ಸಕಾಲ ವ್ಯಾಪ್ತಿಗೊಳಪಡಿಸಲಾಗಿದೆ. ಫಲಾನುಭವಿಗಳು ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದವರಿಗೆ ಉದ್ಯೋಗ ಕಲ್ಪಿಸುವಂತಹ ಯೋಜನೆಗಳನ್ನು ರೂಪಿಸುವಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರಜೋಳ ಹೇಳಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಹಿಂದಿರುಗಿದ್ದು, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಎಲ್ಲರಿಗೂ ಜಾಬ್ ಕಾರ್ಡ್ ನೀಡಿ ಎಲ್ಲರಿಗೂ ಕೆಲಸ ಒದಗಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರಿಗೆ ವರ್ಷದಲ್ಲಿ ಕಡ್ಡಾಯವಾಗಿ 100 ದಿನ ಕೆಲಸ ನೀಡಿ ಅವರ ಕೃಷಿ ಭೂಮಿಯಲ್ಲಿಯೂ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು. ರಾಜ್ಯದಲ್ಲಿ 65 ಲಕ್ಷ ಜಾಬ್ ಕಾರ್ಡ್‍ದಾರರಿದ್ದು, ಅವರಲ್ಲಿ 15 ಲಕ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜಾಬ್ ಕಾರ್ಡ್‍ಗಳನ್ನು ನೀಡಿ ಗ್ರಾಮೀಣ ಪ್ರದೇಶದ ಎಲ್ಲಾ ಕುಟುಂಬಗಳನ್ನು ಈ ಸೌಲಭ್ಯದ ವ್ಯಾಪ್ತಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಲಾಗಿದೆ.

ಕೆ.ಎಂ.ಎಫ್ ಹಾಲಿನ ಸೊಸೈಟಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಸದಸ್ಯರನ್ನಾಗಿ ನೋಂದಾಯಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹಾಲು ಉತ್ಪಾದನೆಯನ್ನು ಕೈಗೊಳ್ಳಲು ಉತ್ತೇಜಿಸಲು ಕರು, ಹಸು ಎಮ್ಮೆಗಳನ್ನು ಸಾಲ ಮತ್ತು ಸಹಾಯಧನದಲ್ಲಿ ಒದಗಿಸಲು ಯೋಜನೆಯನ್ನು ರೂಪಿಸಬೇಕು. ಕೆ.ಎಂ.ಎಫ್ ಮಳಿಗೆಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡಿ ಹಾಲು ಉತ್ಪನ್ನಗಳನ್ನು ಮಾರಲು ಅವಕಾಶ ಕಲ್ಪಿಸಬೇಕು. ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೆ.ಎಂ.ಎಫ್ ಹಾಲಿನ ಸೊಸೈಟಿಗಳನ್ನು ಸ್ಥಾಪಿಸಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ತರಕಾರಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಉತ್ತೇಜನ ನೀಡಬೇಕು. ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಪ್‍ಕಾಮ್ಸ್ ಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರನ್ನು ಸದಸ್ಯರನ್ನಾಗಿ ನೋಂದಾಯಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಹಾಪ್‍ಕಾಮ್ಸ್ ಮೂಲಕ ವಿವಿಧ ಇಲಾಖೆಗಳ ವಸತಿ ನಿಲಯಗಳು ಮತ್ತು ವಸತಿ ಶಾಲೆಗಳಿಗೆ ತರಕಾರಿ ಸರಬರಾಜು ಮಾಡಬೇಕು. ಹಾಪ್‍ಕಾಮ್ಸ್ ನಿಂದ ತರಕಾರಿ ಮತ್ತು ಹಣ್ಣುಗಳಿಗೆ ನಿಗದಿಪಡಿಸಿರುವ ದರವನ್ನು ಆಯಾ ಇಲಾಖೆಗಳು ಭರಿಸುವಂತೆ ಆದೇಶಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಆಯುಕ್ತ ರವಿಕುಮಾರ್ ಸುರಪುರ್, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಸಲಹೆಗಾರರಾದ ಇ.ವೆಂಕಟಯ್ಯ, ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ, ಅಪರ ನಿರ್ದೇಶಕ ನಾಗೇಶ್, ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮುಖ್ಯಸ್ಥ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com