ಪಿಯುಸಿ ಇಂಗ್ಲಿಷ್ ಪರೀಕ್ಷೆ: ವಲಸೆ ಕಾರ್ಮಿಕರ ಮಕ್ಕಳು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ!

ಇದೇ ತಿಂಗಳ 18ರಂದು ನಡೆಯಲಿರುವ ಪಿಯುಸಿ ಇಂಗ್ಲಿಷ್ ಪತ್ರಿಕೆ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿನಿಲಯ ವಾಸಿಯಾಗಿದ್ದ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮಗೆ ಸನಿಹವಾಗುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಇದೇ ತಿಂಗಳ 18ರಂದು ನಡೆಯಲಿರುವ ಪಿಯುಸಿ ಇಂಗ್ಲಿಷ್ ಪತ್ರಿಕೆ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿನಿಲಯ ವಾಸಿಯಾಗಿದ್ದ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಕೊರೋನಾ ಹಿನ್ನೆಲೆಯಲ್ಲಿ ತಮಗೆ ಸನಿಹವಾಗುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ವಿದ್ಯಾರ್ಥಿನಿಲಯ ವಾಸಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳು ಲಾಕ್-ಡೌನಿಂದಾಗಿ ತಮ್ಮ ಸ್ವಂತ ಊರುಗಳಿಗೆ ತೆರಳಿರುವ ಹಿನ್ನೆಲೆಯಲ್ಲಿ ಅವರಿರುವ ಸ್ಥಳದ ಸಮೀಪದ ಜಿಲ್ಲೆಯ, ತಾಲೂಕಿನ ಅವರು ಬಯಸುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿ 16,229 ವಿದ್ಯಾರ್ಥಿಗಳು ಪ್ರಸ್ತುತ ತಾವಿರುವ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಇಚ್ಛೆ ವ್ಯಕ್ತಪಡಿಸಿದ್ದು, ಅದರಂತೆ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗುವ ಪ್ರಕ್ರಿಯೆ ನಡೆಯುತ್ತಿದ್ದು, ಇವರಿಗೆ ನಿಗದಿಪಡಿಸಲಾದ ಪರೀಕ್ಷಾ ಕೇಂದ್ರಗಳ ವಿವರಗಳನ್ನು ಶೀಘ್ರದಲ್ಲೆ ಪಿಯು ಮಂಡಳಿ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಹಾಗೆಯೇ ರಾಜ್ಯದಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದ ಹೊರ ರಾಜ್ಯದ ವಿದ್ಯಾರ್ಥಿಗಳು ತಮ್ಮ ಊರಿಗೆ ತೆರಳಿದ್ದು, ಅವರ ಇಚ್ಛೆಯಂತೆ ಆ ರಾಜ್ಯದ ಗಡಿ ಭಾಗದ ನಮ್ಮ ರಾಜ್ಯದ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ವಿಶೇಷವಾಗಿ ಕಾಸರಗೋಡಿನ ಗಡಿ ಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಗಡಿಭಾಗದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷೆ ಸಮಯದ ನಂತರ ಗಡಿ ಭಾಗದವರೆಗೆ ಬಸ್ ವ್ಯವಸ್ಥೆ ಮಾಡಲು ದಕ್ಷಿಣ ಕನ್ನಡ ಜಿಲ್ಲಾ ಪಿಯು ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಹೆಚ್ಚಿನ ವಿವರಗಳಿಗೆ ಪಿಯು ಮಂಡಳಿಯ ಸಹಾಯವಾಣಿ ಸಂಖ್ಯೆ- 080-23083900 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com