ಕೃಷ್ಣಾ ಮೇಲ್ದಂಡೆ ಯೋಜನೆಗೆ ರೂ.10,000 ಕೋಟಿ ಘೋಷಿಸಿದ ಸಿಎಂ ಯಡಿಯೂರಪ್ಪ

ಕೃಷ್ಣಾ ಮೇಲ್ಡಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ 2020-21ನೇ ಸಾಲಿನಲ್ಲಿ ರೂ.10 ಸಾವಿರ ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕೃಷ್ಣಾ ಮೇಲ್ಡಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ 2020-21ನೇ ಸಾಲಿನಲ್ಲಿ ರೂ.10 ಸಾವಿರ ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. 

ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಹಣ ಮೀಸಲು ಇಡದ ವಿಷಯ ನಿನ್ನೆ ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಂವಿಧಾನ ಕುರಿತು ಮಾತನಾಡಲು ಬಿಜೆಪಿಯ ಅರಗ ಜ್ಞಾನೇಂದ್ರ ಅವರಿಗೆ ಭಾಷಣ ಮಾಡಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ಕಲ್ಪಿಸಿದರು.

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗೆ ಹಾಗೂ 30 ಹಳ್ಳಿಗಳ ಪುನರ್ವಸತಿ ಹಾಗೂ ಪುನರ್‌ ನಿರ್ಮಾಣಕ್ಕೆ 10 ಸಾವಿರ ಕೋಟಿ ರೂ. ಅನುದಾನ ನಿಗದಿಪಡಿಸಲು ನಿರ್ಧರಿಸಲಾಗಿದೆ. ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ. ನಿನ್ನೆ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಈ ನಿರ್ಧಾರ ಮಾಡಿದ್ದೇವೆ. ಇಂದು ದೆಹಲಿಗೆ ಹೋಗುತ್ತಿದ್ದೇನೆ. ಕೇಂದ್ರ ಸರ್ಕಾರದ ಪ್ರಮುಖರ ಜೊತೆ ಮಾತುಕತೆ ನಡೆಸಿ, ಹೇಗಾದರೂ ಸರಿಯೇ ಹೆಚ್ಚುವರಿ ಅನುದಾನ ತರುವ ಪ್ರಯತ್ನ ಮಾಡುತ್ತೇವೆ,. ಇದನ್ನು ನಿನ್ನೆ ಬಜೆಟ್‌ನಲ್ಲಿ ಪ್ರಕಟಿಸಿರಲಿಲ್ಲ ಎಂದು ಹೇಳಿದರು.

ಏನಿದು ಕೃಷ್ಣಾ ಮೇಲ್ದಂಡೆ ಯೋಜನೆ
ಕೃಷ್ಣಾ ನದಿ ನೀರನ್ನು ಉತ್ತರ ಕರ್ನಾಟಕದ ಕೃಷಿ, ಕುಡಿಯುವ ಅಗತ್ಯಗಳಿಗೆ ಪೂರೈಸಲು ಸರ್ಕಾರ ವಿವಿಧ ಯೋಜನೆಗಳನ್ನು ಕೈಗೊಳ್ಳುತ್ತಾ ಬಂದಿದೆ. 1ನೇ ಹಂತದಲ್ಲಿ ಆಲಮಟ್ಟಿ, ನಾರಾಯಣಪುರ ಅಣೆಕಟ್ಟೆ ನಿರ್ಮೀಸಲಾಗಿದೆ. 2ನೇ ಹಂತದಲ್ಲಿ ಈ ಅಣೆಕಟ್ಟೆಗಳಿಗೆ ನಾಲೆ ನಿರ್ಮಿಸಿ ಏತ ನೀರಾವರಿ ಕೈಗೊಳ್ಳಲಾಗಿದೆ. 3ನೇ ಹಂತದಲ್ಲಿ ಆಲಮಟ್ಟಿ ಜಲಾಶಯದ ಎತ್ತರ 517 ಮೀಟರ್ ನಿಂದ 524 ಮೀಟರ್'ಗೆ (5 ಮೀಟರ್) ಎತ್ತರಿಸಲು ಸರ್ಕಾರ ನಿರ್ಧರಿಸಿದೆ. 

ಇದರಿಂದ 25ಕ್ಕೂ ಹೆಚ್ಚು ಹಳ್ಳಿ ಮುಳುಗಡೆಯಾಗಲಿವೆ. ಪುನರ್ವಸತಿ ಮತ್ತು ಪುನರ್ ನಿರ್ಮಾಣ ಮಾಡುವುದೂ ಯೋಜನೆಯಲ್ಲಿದೆ. ಯೋಜನೆಯಿಂದ ನೀರಿನ ಸಂಗ್ರಹ ಹೆಚ್ಚಳವಾಗಲಿದ್ದು, ಬರ ಪರಿಸ್ಥಿತಿ ವೇಳೆ ನೀರಿನ ಕೊರತೆ ನೀಗಿಸಲು ಸಹಕಾರಿಯಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com