
ಬೆಂಗಳೂರು: ರಾಜ್ಯದಲ್ಲೂ ಕೊರೋನಾ ವೈರಾಣು ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಆರನೇ ತರಗತಿವರೆಗೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಈ ಸಂಬಂಧ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 7ರಿಂದ 9ನೇ ತರಗತಿವರೆಗೆ ಮಾರ್ಚ್ 23ರ ಒಳಗೆ ಪರೀಕ್ಷೆ ನಡೆಸಬೇಕು, ಆ ಬಳಿಕ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ರಜೆ ನೀಡಬೇಕು. 10ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ನಿಗದಿಗೊಳಿಸಿರುವ ದಿನಾಂಕದಂದೆ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.
ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಇಚ್ಛಿಸಿದರೆ ಅವರಿಗೆ ಅನುಮತಿ ನೀಡಬೇಕು. ಹಾಗೆಯೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಲೆಯ ಮುಖ್ಯಸ್ಥರುಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.
ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದ ಪೂರ್ವ ಪ್ರಾಥಮಿಕ, ಎಲ್ ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಮಾರ್ಚ್ 9ರಿಂದಲೇ ರಜೆ ಘೋಷಿಸಲಾಗಿದೆ.
Advertisement