ಸರ್ಕಾರಿ ನೌಕರರು, ಹೊರ ರಾಜ್ಯಗಳಿಂದ ಬರುವವರಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ: ಡಾ. ಕೆ. ಸುಧಾಕರ್

ಸರ್ಕಾರಿ ನೌಕರರು ಹಾಗೂ ಹೊರರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್‍ಲೋಡ್ ಮಾಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಸಚಿವ ಸುಧಾಕರ್
ಸಚಿವ ಸುಧಾಕರ್
Updated on

ಬೆಂಗಳೂರು: ಸರ್ಕಾರಿ ನೌಕರರು ಹಾಗೂ ಹೊರರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್‍ಲೋಡ್ ಮಾಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಡನೆ ನಡೆದ ವೀಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲಾ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿ ಆದಷ್ಟು ಹೆಚ್ಚು ಜನರು ಆರೋಗ್ಯ ಸೇತು ಆ್ಯಪ್ ಡೌನ್‍ಲೋಡ್ ಮಾಡುವಂತೆ ಕ್ರಮವಹಿಸಲು ಸೂಚಿಸಿದರು.

ಹೊರರಾಜ್ಯಗಳಿಂದ ಹೆಚ್ಚು ಜನರು ಜಿಲ್ಲೆಗಳಿಗೆ ಬರುತ್ತಿರುವುದರಿಂದ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಾಂತರ ಪ್ರದೇಶಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ವಿಷೇಶ ತಂಡಗಳನ್ನು ರಚಿಸಿ ಹೊರರಾಜ್ಯಗಳಿಂದ ಬರುವವರ ಬಗ್ಗೆ ಪ್ರತಿನಿತ್ಯ ವರದಿ ಮಾಡಲು ಸೂಚಿಸಿ ಎಂದರು.

ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಗಂಟಲು ದ್ರವ ಸಂಗ್ರಹ ಘಟಕಗಳನ್ನು ಜಿಲ್ಲಾವಾರು ಹೆಚ್ಚು ಸ್ಥಾಪಿಸಬೇಕು ಎಂದರಲ್ಲದೆ, ಖಾಸಗಿ ಲ್ಯಾಬ್‍ಗಳು ಗಂಟಲು ದ್ರವದ ಪರೀಕ್ಷೆ ಮಾಡಲು ಮುಂದಾದಲ್ಲಿ ಅವರಿಗೆ ಪ್ರತಿ ಪ್ರಕರಣಕ್ಕೆ 2,250 ರೂಪಾಯಿ ಹಣ ನೀಡಿ ಪರೀಕ್ಷೆ ಮಾಡಿಸಿ ಎಂದರು. ಆದರೆ ಯಾವ ಜಿಲ್ಲೆಗಳಲ್ಲಿ ಗಂಟಲು ದ್ರವದ ಪರೀಕ್ಷೆಗೆ ಎಲ್ಲಾ ರೀತಿಯ ಸೌಲಭ್ಯಗಳು ಇವೆಯೋ ಅಂತಹ ಜಿಲ್ಲೆಗಳು ಖಾಸಗಿ ಲ್ಯಾಬ್‍ಗಳನ್ನು ಅವಲಂಭಿಸುವ ಅವಶ್ಯಕತೆ ಇಲ್ಲ ಎಂದರು.

ವಿವಿಧ ಜಿಲ್ಲೆಗಳಿಗೆ ಮಹರಾಷ್ಟ್ರ ಹಾಗೂ ಗುಜರಾತಿನಿಂದ ಹೆಚ್ಚು ಜನರು ಬರುತ್ತಿದ್ದು, ಅವರೆಲ್ಲರನ್ನೂ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಿ ತಪಾಸಣೆ ಮಾಡಿ ಎಂದು ಅವರು ತಿಳಿಸಿದರು. ಕೆಲವು ಜಿಲ್ಲೆಗಳಲ್ಲಿ ಔಷಧಾಲಯಗಳಿಂದ ಜ್ವರ ಹಾಗೂ ಶೀತ ಸಂಬಂಧಿತ ಔಷಧಿಗಳನ್ನು ಖರೀದಿಸುವವರ ವರದಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ, ಜಿಲ್ಲಾಧಿಕಾರಿಗಳು ಇದರ ಬಗ್ಗೆ ಕ್ರಮ ವಹಿಸಬೇಕು ಎಂದರು.

ರಾಜ್ಯ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಾ|| ಪಂಕಜ್ ಪಾಂಡೆ ಮಾತನಾಡಿ, ಪ್ರತಿ ಜಿಲ್ಲೆಗಳ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಗಂಟಲು ದ್ರವ ಸಂಗ್ರಹ ಘಟಕಗಳನ್ನು ಸ್ಥಾಪಿಸುವುದರಿಂದ ಹೆಚ್ಚು ಮಾದರಿಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಆರ್ ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪವಿಭಾಗಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಕೃಷ್ಣಮೂರ್ತಿ, ಹಿಮ್ಸ್ ನಿರ್ದೇಶಕ ಡಾ. ರವಿಕುಮಾರ್ ಹಾಗೂ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com