ಉಪಚುನಾವಣೆ ಸಮರ: ಮಧ್ಯಾಹ್ನ 1 ಗಂಟೆಯವರೆಗೆ ಶಿರಾದಲ್ಲಿ ಶೇ.44.13, ಆರ್.ಆರ್.ನಗರದಲ್ಲಿ ಶೇ.26.58 ಮತದಾನ

ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣಾ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೂ ರಾಜರಾಜೇಶ್ವರಿ ನಗರದಲ್ಲಿ ಶೇ.26.58 ಹಾಗೂ ಶಿರಾದಲ್ಲಿ ಶೇ.44.13ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 
ಶಿರಾದಲ್ಲಿ ಬಿರುಸಿನಿಂದ ಸಾಗುತ್ತಿರುವ ಮತದಾನ ಪ್ರಕ್ರಿಯೆ
ಶಿರಾದಲ್ಲಿ ಬಿರುಸಿನಿಂದ ಸಾಗುತ್ತಿರುವ ಮತದಾನ ಪ್ರಕ್ರಿಯೆ

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣಾ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೂ ರಾಜರಾಜೇಶ್ವರಿ ನಗರದಲ್ಲಿ ಶೇ.26.58 ಹಾಗೂ ಶಿರಾದಲ್ಲಿ ಶೇ.44.13ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.  

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ದಿನಗಳಿಂದ ರಾಜ್ಯದ ಪ್ರಮುಖ ಮೂರು ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭರ್ಜರಿ ಪ್ರಚಾರ ನಡೆಸಿತ್ತು. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆಯೇ ಮತದಾರರ ಸೆಳೆಯರು ಕೊನೆ ಕ್ಷಣದವರೆಗೂ ಗೆಲುವಿಗೆ ಕಾರ್ಯತಂತ್ರಗಳನ್ನು ರೂಪಿಸಲಾಗಿತ್ತು. 

ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣದಲ್ಲಿದ್ದಾರೆ. 

ಇನ್ನು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಟಿಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಸೇರಿದಂತೆ ಮತ್ತಿತರರು ಕಣದಲ್ಲಿದ್ದಾರೆ. 

ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಮತದಾನ ನಡೆಯಲಿದ್ದು, ಮತದಾರರಿಗೆ ಎಡಗೈ ಮಧ್ಯದ ಬೆರಳಿಗೆ ಶಾಯಿ ಹಾಕಲಾಗುತ್ತಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ಸಲುವಾಗಿ ಈಗಾಗಲೇ ಎರಡೂ ಕ್ಷೇತ್ರಗಳಲ್ಲೂ ಸಾಕಷ್ಟು ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಶಿರಾದಲ್ಲಿ ಒಟ್ಟು 3857 ಸಿಬ್ಬಂದಿನಯ್ನು ನಿಯೋಜಿಸಲಾಗಿದೆ. ಇನ್ನು ಆರ್.ಆರ್.ನಗರ ಕ್ಷೇತ್ರದಲ್ಲಿ 4203ಮತದಾನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 

ಮತಪಟ್ಟಿಯಲ್ಲಿ ಹೆಸರು ಹೊಂದಿರುವವರು ಮತ ಚಲಾಯಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಹಾಜರುಪಡಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ದಾಖಲೆ ಸಲ್ಲಿಸಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ. ಆಧಾರ್ ಕಾರ್ಡ್, ನರೇಗಾ ಗುರುತಿನ ಚೀಟಿ, ವಾಹನ ಚಾಲನಾ ಪರವಾನಗಿ, ಪಾನ್ ಕಾರ್ಡ್, ಪಾಸ್'ಪೋರ್ಟ್, ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಕೆಲಸ ಮಾಡುವ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ. 

ಸಂಸದರು, ಶಾಸಕರು ನೀಡಿದ ಅಧಿಕೃತ ಗುರುತಿನ ಚೀಟಿ, ಪದವಿ ಪ್ರಮಾಣಪತ್ರ, ಅಂಗವಿಕಲರ ಪ್ರಮಾಣಪತ್ರವನ್ನೂ ಕೂಡ ಹಾಜರುಪಡಿಸಿ ಮತಚಲಾಯಿಸಬಹುದಾಗಿದೆ. 

ನವೆಂಬರ್ 10 ರಂದು ಮತ ಎಣಿಕೆ ನಡೆಯಲಿದ್ದು, ಶಿರಾ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಆರ್.ಆರ್.ನಗರ ಕ್ಷೇತ್ರದ ಮತ ಎಣಿಕೆಯು ಶ್ರೀಜ್ಞಾನಾಕ್ಷಿ ವಿದ್ಯಾನಿಕೇತನದಲ್ಲಿ ನಡೆಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com