

ಮಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲೆ ಆರೋಪಗಳಿದ್ದು, ಸಾಕ್ಷ್ಯಾಧಾರಗಳು ದೊರಕಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿಯವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿರುವುದರಲ್ಲಿ ನನ್ನ ಹಸ್ತಕ್ಷೇಪವಿದೆ ಎಂಬ ಆರೋಪಗಳಲ್ಲಿ ಸತ್ಯವಿಲ್ಲ. ರಾಜ್ಯ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪವನ್ನೂ ಮಾಡಿಲ್ಲ. ವಿನಯ್ ಕುಲಕರ್ಣಿ ವಿರುದ್ಧ ಆರೋಪಗಳು ಕೇಳಿ ಬಂದಿದ್ದವು. ಈ ಸಂಬಂಧ ಸಿಬಿಐಗೆ ಸಾಕ್ಷ್ಯಾಧಾರಗಳು ದೊರಕಿರಬಹುದು. ಹೀಗಾಗಿಯೇ ವಶಕ್ಕೆ ಪಡೆದಿದ್ದಾರೆ. ಯೋಗೇಶ್ ಗೌಡ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿದೆ. ಈಗಲಾದರೂ ನ್ಯಾಯ ಸಿಗಲಿ ಎಂಬುದೇ ನಮ್ಮ ಅಭಿಪ್ರಾಯ ಎಂದು ಹೇಳಿದ್ದಾರೆ.
ಇದೇ ವೇಳೆ ವಿನಯ್ ಕುಲಕರ್ಣಿ ಬಿಜೆಪಿಗೆ ಸೇರುತ್ತಾರೆಂಬ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ ಅವರು, ಇದೆಲ್ಲಾ ಶುದ್ಧ ಸುಳ್ಳು ಎಂದು ತಿಳಿಸಿದ್ದಾರೆ.
ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಈ ಹಿಂದೆ, ಕೆಲ ರಾಜಕಾರಣಿಗಳು ತಮ್ಮ ರಾಜಕೀಯ ಮತ್ತು ಹಣದ ಬಲ ಬಳಸಿಕೊಂಡು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದರು. ಇದೀಗ ಪರಿಸ್ಥಿತಿ ಬದಲಾಗಿದೆ. ವಿನಯ್ ಕುಲಕರ್ಣಿಯವರನ್ನು ಇದೀಗ ಸಿಬಿಐ ವಿಚಾರಣೆ ನಡೆಸಲಿದ್ದಾರೆ. ಸಿಬಿಐ ವಶಕ್ಕೆ ಪಡೆದುಕೊಂಡಿರುವ ಬೆಳವಣಿಗೆಯನ್ನು ನಾನು ಸ್ವಾಗತಿಸುತ್ತೇನೆಂದಿದ್ದಾರೆ.