

ಬೆಂಗಳೂರು: ಐಎಂಎ ಕಂಪನಿಯ ಠೇವಣಿದಾರರಿಗೆ ಹಣ ಬಿಡುಗಡೆ ಮಾಡುವ ಸಂಬಂಧ ನ.25ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದೆಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮಾಹಿತಿ ನೀಡಿದೆ.
ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ. ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಶ್ವರ್ ರಾವ್ ಅವರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದ ವಕೀಲರು, ಐಎಂಎ ಪ್ರಕರಣದಲ್ಲಿ ಠೇವಣಿದಾರರ ಆಧಾರ್ ದೃಢೀಕರಣಕ್ಕೆ ನ.6ರಂದು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಠೇವಣಿದಾರರ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ನ.25 ರಿಂದ ಆನ್'ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.