ಮಧ್ಯಾಹ್ನದ ಬಿಸಿಯೂಟ ಪರಿಹಾರ ಪರಿಷ್ಕರಿಸಿ: ಹೈಕೋರ್ಟ್

ಲಾಕ್‌ಡೌನ್‌ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತಗೊಂಡಿದ್ದ ಕಾರಣಕ್ಕೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪರಿಹಾರ ನೀಡುವ ಸಂಬಂಧ ಪರಿಷ್ಕೃತ ಪ್ರಸ್ತಾವ ಸಲ್ಲಿಸುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೋಮವಾರ ನಿರ್ದೇಶನ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತಗೊಂಡಿದ್ದ ಕಾರಣಕ್ಕೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪರಿಹಾರ ನೀಡುವ ಸಂಬಂಧ ಪರಿಷ್ಕೃತ ಪ್ರಸ್ತಾವ ಸಲ್ಲಿಸುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೋಮವಾರ ನಿರ್ದೇಶನ ನೀಡಿದೆ.

‘ರಾಜ್ಯ ಸರ್ಕಾರವು ಬಿಸಿಯೂಟ ಸ್ಥಗಿತಗೊಂಡಿದ್ದ ಕಾರಣಕ್ಕಾಗಿ ಪರಿಹಾರ ನೀಡಲು ರೂಪಿಸಿರುವ ಯೋಜನೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಯಮಗಳು–2015ರ ನಿಯಮ 3ರ ಉಪ ನಿಯಮ 9 ಅನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಸರ್ಕಾರ ತನ್ನ ನಿರ್ಧಾರವನ್ನು ಪರಿಷ್ಕರಿಸಬೇಕು’ ಎಂದು  ಅಭಯ್ ಶ್ರೀನಿವಾಸ ಓಕಾ ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ನಿರ್ದೇಶನ ನೀಡಿತು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ರಾಜ್ಯವು ಮಕ್ಕಳಿಗೆ ಪರಿಹಾರವನ್ನು ನೀಡಬೇಕು ಎಂದು ನ್ಯಾಯಪೀಠ ಮೌಖಿಕವಾಗಿ ಸೂಚಿಸಿದೆ. ಪರಿಹಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಪರಿಹಾರ ನೀಡಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತು.

ಇದು ಸಂವಿಧಾನದ 21 ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಹೇಳಿದ ನ್ಯಾಯಪೀಠ. ಸರ್ಕಾರದ ವಕೀಲ ವಿಕ್ರಮ್ ಹುಯಿಲ್ಗೋಳ್ ಪರಿಹಾರವನ್ನು ಲೆಕ್ಕಹಾಕುವ ವಿಧಾನವನ್ನು ವಿವರಿಸಿದರು. ಅರ್ಜಿಯ ವಿಚಾರಣೆಯನ್ನು ನವೆಂಬರ್‌ 30ಕ್ಕೆ ಮುಂದೂಡಿ ವಿಭಾಗೀಯ ಪೀಠ ಆದೇಶಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com