ರೂ.10 ಕೋಟಿ ವರೆಗೂ ಆರ್ಥಿಕ ಇಲಾಖೆ ಅನುಮತಿ ಅಗತ್ಯವಿಲ್ಲ, 2020-21 ಕೊನೆ ತ್ರೈಮಾಸಿಕ ಅನುದಾನ ಬಿಡುಗಡೆಗೆ ಸೂಚನೆ

2020-21 ನೇ ಸಾಲಿನ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆ ಮಾಡಲು ವಿವಿಧ ಇಲಾಖೆಗಳಿಗೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: 2020-21 ನೇ ಸಾಲಿನ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆ ಮಾಡಲು ವಿವಿಧ ಇಲಾಖೆಗಳಿಗೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ.

ಈ ಕುರಿತು ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಟಿಪ್ಪಣಿ ಬರೆದಿದ್ದು, ಯಾವುದೇ ಇಲಾಖೆ 2020-21 ನೇ ಸಾಲಿನಲ್ಲಿ ನವೆಂಬರ್ ನಿಂದ ಫೆಬ್ರವರಿವರೆಗೂ ವೇತನ, ಭತ್ಯೆ, ಪಿಂಚಣಿ ಸೇರಿದಂತೆ ಅನುದಾನ ಬಿಡುಗಡೆ ಮಾಡಲು ಇಲಾಖಾ ಮುಖ್ಯಸ್ಥರಿಗೆ ಅಧಿಕಾರ ನೀಡಿ ಆದೇಶಿಸಿದ್ದಾರೆ.

ವಿವಿಧ ಇಲಾಖೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ 10 ಕೋಟಿ ರೂ ವರೆಗಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆಯುವ ಅಗತ್ಯವಿಲ್ಲ ಎಂದು ತಿಳಿಸಿದ್ದು, ಆದರೆ, ಹಣ ಖರ್ಚು ಮಾಡಿರುವ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ನೀಡುವಂತೆ ಸೂಚಿಸಲಾಗಿದೆ.

ಕೋರೊನಾ ಪರಿಣಾಮದಿಂದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಬಿಡುಗಡೆಯ ಕುರಿತು ಇಲಾಖೆಗಳಿಗೆ ನೀಡಿರುವ ಸೂಚನೆ ಮುಂದುವರೆಯಲಿದ್ದು, 10 ಕೋಟಿವರೆಗಿನ ಹಾಲಿ ಚಾಲ್ತಿಯಲ್ಲಿರುವ ಹಾಗೂ ಈಗಾಗಲೇ ಚಾಲನೆಯಲ್ಲಿರುವ ಯೋಜನೆಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಬೇಕು. ಯಾವುದೇ ಹೊಸ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತಿಲ್ಲ. ಹಾಗೆ ಮಾಡಬೇಕೆಂದರೆ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆಯುವುದು ಕಡ್ಡಾಯ ಎಂದು ಸೂಚಿಸಲಾಗಿದೆ.

ಯಾವುದೇ ಇಲಾಖೆ 10 ಕೋಟಿಗಿಂತ ಹೆಚ್ಚಿನ ಮೊತ್ತದ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ಮೊದಲು ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಅಲ್ಲದೇ ಈಗಾಗಲೇ ಏಪ್ರಿಲ್‍ನಿಂದ ಅಕ್ಟೋಬರ್‍ವರೆಗೆ ಬಿಡುಗಡೆ ಮಾಡಿರುವ ಹಣದಲ್ಲಿ ಶೇಕಡಾ 75 ರಷ್ಟು ಖರ್ಚು ಮಾಡಿರುವುದನ್ನು ಖಾತ್ರಿ ಮಾಡಿಕೊಂಡು ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು. ಈ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ಸಲ್ಲಿಸುವಂತೆ ಇಲಾಖೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com