ರಾಜ್ಯ

ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೂಚನೆ
ಅಧಿಕಾರಿಗಳೊಂದಿಗೆ ಮಾತನಾಡುತ್ತಿರುವ ಸಿಎಂ ಯಡಿಯೂರಪ್ಪ
Published On :

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್-19 ತಪಾಸಣೆಗೆ ಸಂಬಂಧಿಸಿದಂತೆ ಇರುವ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಮುಖ್ಯಮಂತ್ರಿಗಳು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಸದ್ಯಕ್ಕೆ ಸೋಂಕು ಹಾಗೂ ಮರಣ ಪ್ರಮಾಣದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ ಎಂದರು.

ಮಾರ್ಗಸೂಚಿಗಳ ಅನುಷ್ಠಾನಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉಪಸ್ಥಿತರಿದ್ದರು.

ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಬೆಳಗಾವಿ ಉಪ ವಿಭಾಗಾಧಿಕಾರಿಗಳಾದ ಅಶೋಕ ತೇಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.