ದೀಪಾವಾಳಿ: ಪಟಾಕಿ ಮಾರಾಟಕ್ಕೆ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಕೋವಿಡ್‌ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ನಿಯಂತ್ರಣ ಹೇರಿರುವ ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ ಹಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೋವಿಡ್‌ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ನಿಯಂತ್ರಣ ಹೇರಿರುವ ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ ಹಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಪಟಾಕಿ ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿ ಪಡೆದಿರಬೇಕು. ನ.1ರಿಂದ 17ರವರೆಗೆ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ಪರವಾನಗಿಯಲ್ಲಿ ನಮೂದಿಸುವ ಸ್ಥಳದಲ್ಲಿಯೇ ಮಾರಾಟಗಾರರು ಅಂಗಡಿ ಇಡಬೇಕು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆ ಸ್ಥಾಪಿಸಬೇಕು. ಮಳಿಗೆಗಳ ಎರಡೂ ಕಡೆಗಳಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಮಳಿಗೆಗಳ ನಡುವೆ 6 ಮೀಟರ್‌ ಅಂತರವಿರಬೇಕು ಎಂದು ಮಾರ್ಗಸೂಚಿ ತಿಳಿಸಿದೆ. 

ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಮಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಇರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರತಕ್ಕದ್ದು.

ಪಟಾಕಿ ಖರೀದಿ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆ ಆಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ/ ಕಾರ್ಪೊರೇಷನ್/ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com