ಕೋವಿಡ್-19: ಹೈರಿಸ್ಕ್ ಪ್ರದೇಶಗಳಲ್ಲಿ ರ‍್ಯಾಂಡಮ್ ಪರೀಕ್ಷೆ ನಡೆಸಲು ಬಿಬಿಎಂಪಿ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಲ್ಲಿ ರ‍್ಯಾಂಡಮ್ ಪರೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಹೆಚ್ಚು ಸೋಂಕಿತರಿರುವ ಪ್ರದೇಶಗಳಲ್ಲಿ ರ‍್ಯಾಂಡಮ್ ಪರೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. 

ಆಯಾ ವಾರ್ಡ್ ಗಳಲ್ಲಿ ದಾಖಲಾಗಿರುವ ಕೊರೋನಾ ಪ್ರಕರಣಗಳನ್ನು ಆಧರಿಸಿ, ಯಾವ ವಾರ್ಡ್ ಗಳಲ್ಲಿ ಹೆಚ್ಚು ಸೋಂಕಿತರಿರುತ್ತಾರೋ ಆ ವಾರ್ಡ್ ಗಳಲ್ಲಿ ರ‍್ಯಾಂಡಮ್ ಪರೀಕ್ಷೆ ನಡೆಸಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ. 

ಶಿವಾಜಿನಗರ ಒಂದರಲ್ಲೇ ನಿನ್ನೆ 450ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು, ಕಳೆದ ಎರಡು ವಾರಗಳಲ್ಲಿ ಈ ಪ್ರದೇಶದಲ್ಲಿ ಶೇ.25-30ರಷ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದು ರಾಜ್ಯದ ಸರಾಸರಿ 13- 14 ಶೇಕಡಾಕ್ಕಿಂತ ಹೆಚ್ಚಾಗಿದೆ. ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ, ಸರಾಸರಿ ಶೇಕಡಾ 10 ಕ್ಕಿಂತ ಕಡಿಮೆ ಇರಬೇಕು.

ಐಎಲ್ಐ, ಸಾರಿ ಜೊತೆಗೆ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರು, ಸೋಂಕಿತರೊಂದಿಗೆ ಪ್ರಥಮ ಹಾಗೂ ದ್ವೀತಿಯ ಸಂಪರ್ಕಗಳನ್ನು ಹೊಂದಿರುವವರಿಗೂ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಇಲ್ಲದೆ, ವಾಣಿಜ್ಯ ಪ್ರದೇಶಗಳಿಗೆ ಭೇಟಿ ನೀಡುವ ಜನರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕಿತ ಪ್ರಕರಣಗಳ ಸಂಖ್ಯೆಗೆ ಅನುಗುಣವಾಗಿ ಪರೀಕ್ಷೆಗಳನ್ನು ತೀವ್ರಗೊಳಿಸಲಾಗುತ್ತದೆ. ಇದರಿಂದ ಹೆಚ್ಚೆಚ್ಚು ಸೋಂಕು ಪ್ರಕರಣಗಳನ್ನು ಶೀಘ್ರಗತಿಯಲ್ಲಿ ಗುರ್ತಿಸಲು ಸಹಾಯಕವಾಗುತ್ತದೆ ಎಂದು ಬಿಬಿಎಂಪಿ (ಆರೋಗ್ಯ) ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ಅವರು ಹೇಳಿದ್ದಾರೆ. 

ಶಿವಾಜಿನಗರ, ಜೆಸಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ ಹೆಚ್ಚು ಜನರು ಸೇರುವ ಪ್ರದೇಶಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಸ್ವಚ್ಛತೆ ಕಾಪಾಡಿಕೊಳ್ಳುವಂತಹ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಈ ಪ್ರದೇಶಗಳಲ್ಲಿ ಪರಿಣಾಮಕಾರಿ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬಿಬಿಎಂಪಿ ನಿರ್ಧಾರವನ್ನು ಕೆಲವರು ವಿರೋಧಿಸುತ್ತಿದ್ದಾರೆ. ಕೆಲವರು ಇದನ್ನು ಕಿರುಕುಳ ಎಂದು ಆರೋಪಿಸುತ್ತಿದ್ದಾರೆ. ಆದರೆ, ನಿಜವಾದ ಉದ್ದೇಶ ಜನರಿಗೆ ಒಳಿತಾಗಬೇಕೆನ್ನುವುದಾಗಿದೆ. ಪರೀಕ್ಷೆ ನಡೆಸಲು ತಾತ್ಕಾಲಿಕ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ಚಿಂತನೆಗಳು ನಡೆಯುತ್ತಿವೆ. ಪರೀಕ್ಷೆಗಳನ್ನು ಹೆಚ್ಚೆಚ್ಚು ಮಾಡುವುದರಿಂದ ಸೋಂಕಿತರನ್ನು ಶೀಘ್ರಗತಿಯಲ್ಲಿ ಹುಡುಕಲು, ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ ಎಂದು ಶಿವಾಜಿನಗರದ ಬಿಬಿಎಂಪಿಯ ಹಿರಿಯ ಅಧಿಕಾರಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com