
ಬೆಂಗಳೂರು: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಮತ್ತು ಕೋಟತಟ್ಟು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯನ್ನು ಕಾರಂತರ ಜನ್ಮದಿನವಾದ ಅ.10ರಂದು ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
15 ವರ್ಷದಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ವೀರಪ್ಪ ಮೊಯ್ಲಿ, ವೆಂಕಟಾಚಲಯ್ಯ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ್ ಕಾಸರವಳ್ಳಿ, ಜಯಶ್ರೀ, ಡಾ.ಎಂ.ಮೋಹನ ಆಳ್ವ, ಸಾಲುಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ.ಬಿ.ಎಂ.ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರಾ ಅವರಿಗೆ ಹಿಂದಿನ ವರ್ಷಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಸಾಹಿತ್ಯ ಕ್ಷೇತ್ರದ ಗಣನೀಯ ಸೇವೆ ಪರಿಗಣಿಸಿ ಈ ಸಾಲಿನಲ್ಲಿ ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
Advertisement