ರಾಜ್ಯದಲ್ಲಿ ಲಾಕ್ ಡೌನ್ ಏಪ್ರಿಲ್ 30ರ ವರೆಗೆ ವಿಸ್ತರಣೆ, ಈ ಲಾಕ್ ಡೌನ್ ವಿಭಿನ್ನವಾಗಿರುತ್ತೆ: ಸಿಎಂ ಯಡಿಯೂರಪ್ಪ

ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 30ರ ವರೆಗೆ ಲಾಕ್ ವಿಸ್ತರಿಸುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 30ರ ವರೆಗೆ ಲಾಕ್ ವಿಸ್ತರಿಸುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಪ್ರಧಾನಮಂತ್ರಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ನಾಲ್ಕು ಗಂಟೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಪ್ರಮುಖವಾಗಿ ಕೊರೋನಾ ಸೋಂಕು ಸಮುದಾಯಕ್ಕೆ ಹರಡದಂತೆ ಎಚ್ಚರ ವಹಿಸಲು ಸೂಚಿಸಿದ್ದಾರೆ ಎಂದರು.

ಕೃಷಿ, ಕೈಗಾರಿಕೆ, ಕಾರ್ಮಿಕರಿಗೆ ಉದ್ಯೋಗಕ್ಕೆ ಅನುಕೂಲ ಕಲ್ಪಿಸುವ ಜತೆಗೆ ಸರ್ಕಾರಿ ಕಚೇರಿಗಳನ್ನು ಭಾಗಶಃ ಆರಂಭಿಸಲು ಅನುಮತಿ ನೀಡಲಾಗುವುದು. 2.84 ಲಕ್ಷ ಪಿಪಿಇ ಕಿಟ್ ಹಾಗೂ ಎರಡು ದಿನಕ್ಕೊಮ್ಮೆ 2 ಲಕ್ಷ ಮಾಸ್ಕ್ ಕಳುಹಿಸುವುದಾಗಿ ಭರವಸೆ ನೀಡಿದ್ದಾರೆ. ದೇಶಾದ್ಯಂತ ಇದುವರೆಗೆ ಕೊರೋನಾ ಸೋಂಕು ಪತ್ತೆಗೆ 220 ಲ್ಯಾಬ್ ಗಳಿದ್ದು ಏಪ್ರಿಲ್ ಅಂತ್ಯಕ್ಕೆ 300 ಲ್ಯಾಬ್ ಆರಂಭಿಸುವ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ ಎಂದರು.

ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ಎರಡು ವಾರಗಳ ಕಾಲ ಲಾಕ್ ಡೌನ್ ಅನಿವಾರ್ಯವಾಗಿದೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಸಡಿಲ ಆಗಬಾರದು ಎಂದು ಪ್ರಧಾನಿಗಳು ಸೂಚಿಸಿರುವುದಾಗಿ ತಿಳಿಸಿದರು.

ಮುಂದಿನ ಎರಡು ವಾರಗಳ ಲಾಕ್ ಡೌನ್ ವಿಭಿನ್ನವಾಗಿರಲಿದ್ದು, ಈ ಕುರಿತು ಕೇಂದ್ರ ಸರ್ಕಾರ ಇನ್ನು ಎರಡ್ಮೂರು ದಿನದಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ. ಹೇಗೆ ಲಾಕ್ ಡೌನ್ ಜಾರಿಯಾಗಬೇಕು ಎಂಬ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಸಿದ್ದಪಡಿಸಲಿದೆ. ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊರೋನಾ ವಿರುದ್ಧ ಅವಿರತ ದುಡಿಯುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ವಿರುದ್ದ ದೌರ್ಜನ್ಯ ನಡೆದರೆ ಕಠಿಣ ಕ್ರಮ ಜರುಗಿಸಲು ಪ್ರಧಾನಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರ ಜತೆಗೆ ಆರೋಗ್ಯಸೇತು ಮೊಬೈಲ್ ಆ್ಯಪ್ ಬಳಕೆಗೆ ಹೆಚ್ವಿನ ಒತ್ತು ನೀಡುವಂತೆ ಸಲಹೆ ಮಾಡಿದ್ದಾರೆ. ಕಾಳಸಂತೆಯಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ತಿಳಿಸಿದರು.

ಏಪ್ರಿಲ್ 10ರಿಂದ ಮೀನುಗಾರಿಕೆ, ಮೀನು ಸಂಸ್ಕರಣಕ್ಕೆ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿಗಳು ತಿಳಿಸಿದ್ದು, ಇದರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ಸಹಕಾರಿಯಾಗಲಿದೆ ಎಂದರು.

ಹಾಟ್ ಸ್ಪಾಟ್ ಗಳನ್ನು ಗುರುತಿಸಿ, ಸೀಲ್ ಡೌನ್ ಮಾಡುವ, ಇತರೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯಗಳು ಮಾಡುತ್ತಿರುವ ನಿಯಂತ್ರಣ ಪ್ರಯತ್ನಗಳನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ನಾವು ಒಗ್ಗಟ್ಟಿನಿಂದ ಹೋರಾಡಿದರೆ ಮಾತ್ರವೇ ಈ ಹೋರಾಟದಲ್ಲಿ ಯಶಸ್ವಿಯಾಗಲು ಸಾಧ್ಯ. ದೇಶದಲ್ಲಿ ಕೋವಿಡ್ ಪ್ರಕರಣಗಳ ಬೆಳವಣಿಗೆಯ ದರ ಲಾಕ್ ಡೌನ್ ನಂತರ ಶೇ. 28 ರಿಂದ ಶೇ. 14 ಕ್ಕೆ ಇಳಿದಿರುವುದು ಸಮಾಧಾನದ ಸಂಗತಿ ಎಂದು ತಿಳಿಸಿದ್ದಾರೆ ಎಂದರು.
ಕೊರೋನಾ ಹರಡುವ 142 ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದ್ದು, ಇಲ್ಲಿ ತೀವ್ರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈ ವರೆಗೆ 2.84 ಲಕ್ಷ ಪಿಪಿಇ ಕಿಟ್ ಗಳನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೂರೈಕೆ ಮಾಡಲಾಗುವುದು. ಪ್ರತಿ ಎರಡು ದಿನಗಳಿಗೊಮ್ಮೆ 2 ಲಕ್ಷ ಮಾಸ್ಕ್ ಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿರುವುದಾಗಿ ಮೋದಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿಯವರು ನಗರಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ಹಳ್ಳಿಯ ಜನರು ಸ್ವಾಗತಿಸದ ಕಾರಣ ಹಳ್ಳಿಗಳಿಗೆ ಕಳುಹಿಸಬಾರದು. ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಅಗತ್ಯ ವಸ್ತುಗಳ ಮಾರಾಟವಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳಿದ್ದು, ರಾಜ್ಯ ಸರ್ಕಾರಗಳು ಈ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಸಡಿಲಗೊಳಿಸಬಾರದು ಎಂದು ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com