ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ
ಆದಷ್ಟು ಬೇಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
Published: 13th December 2020 02:08 PM | Last Updated: 13th December 2020 02:08 PM | A+A A-

ಸುಪ್ರೀಂಕೋರ್ಟ್
ಬೆಂಗಳೂರು: ಆದಷ್ಟು ಬೇಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಸರ್ಕಾರ ಪ್ರಯತ್ನಿಸುತ್ತಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಚುನಾವಣಾ ಆಯೋಗ ಹೇಳಿದರೂ ಸರ್ಕಾರ ಸಿದ್ಧವಿಲ್ಲ, ಆದ್ದರಿಂದ ಹೆಚ್ಚಿನ ಕಾಲಾವಕಾಶ ಕೋರಿ ಡಿಸೆಂಬರ್ 10 ರಂದು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಈ ಪ್ರಕರಣ ವಿಚಾರಣೆಗೆ ಬರಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಮೀಸಲಾತಿ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಆರು ವಾರಗಳೊಳಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ಇತ್ತೀಚಿಗೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ಸಂಬಂಧ ಏನು ಮಾಡಬೇಕು ಎಂಬುದರ ಬಗ್ಗೆ ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಲಾಯಿತು.
ವಿಧಾನಸಭೆಯಲ್ಲಿ ಬಿಬಿಎಂಪಿ ಮಸೂದೆ ಅಂಗೀಕಾರಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಹೊಸ ಕಾಯ್ದೆ ಅನುಸಾರವೇ ಚುನಾವಣೆ ನಡೆಯಬೇಕೆಂದು ಇತರ ಶಾಸಕರು ಬಯಸುತ್ತಿದ್ದಾರೆ. ಆದ್ದರಿಂದ ಹೆಚ್ಚಿನ ಕಾಲಾವಕಾಶ ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಯಿತು ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.