ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಕೆಎಲ್ಇ ವಿದ್ಯಾರ್ಥಿಗಳ ಬಂಧನ

ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಾಶ್ಮೀರ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿಗಳು
ಬಂಧಿತ ವಿದ್ಯಾರ್ಥಿಗಳು

ಹುಬ್ಬಳ್ಳಿ: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಾಶ್ಮೀರ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪುಲ್ವಾಮಾ ದಾಳಿಯಾಗಿ ಶುಕ್ರವಾರಕ್ಕೆ ಒಂದು ವರ್ಷವಾದ ಬೆನ್ನಲ್ಲೇ ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ಕಾಶ್ಮೀರ ಮೂಲದ ಅಮೀರ್, ತಾಲೀಬ್ ಮತ್ತು ಬಸೀತ್ ಪಾಕಿಸ್ತಾನ ಸೇನೆಯ ಹಾಡಿಗೆ ಧ್ವನಿಗೂಡಿಸಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ವಿಡಿಯೋ ಮಾಡಿ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದರು. ಇಂದು ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಿದಲ್ಲದೇ ವಿದ್ಯಾರ್ಥಿಗಳನ್ನ ಥಳಿಸಿದ್ದರು.

ಈ ವಿಚಾರದ ಬೆನ್ನಲ್ಲೇ ಈ ಮೂವರೂ ವಿದ್ಯಾರ್ಥಿಗಳನ್ನು ಹುಬ್ಳಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹುಬ್ಬಳ್ಳಿ ಪೊಲೀಸ್ ಆಯುಕ್ತ ಆರ್ ದಿಲೀಪ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದ್ದು ಮುಂದಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಬಂಧಿತ ಅಮೀರ್ ಸಿವಿಲ್ ಇಂಜಿನಿಯರಿಂಗ್‍ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದವನು ಎಂದು ತಿಳಿದು ಬಂದಿದೆ. ಅಲ್ಲದೇ ತಾಲೀಬ್ ಹಾಗೂ ಬಸೀತ್ ಇಬ್ಬರು ಸಿವಿಲ್ ಇಂಜಿನಿಯರಿಂಗ್ ಮೊದಲ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು. ತಾಲೀಬ್ ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದ ವಿದ್ಯಾರ್ಥಿಯಾದರೆ, ಬಸೀತ್ ಉತ್ತರ ಕಾಶ್ಮೀರದ ಸಂಪೂರೆಯವನು ಎಂದು ತಿಳಿದು ಬಂದಿದೆ. ಈ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಗೋಕುಲ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ತನಿಖೆ ಕೈಗೊಳ್ಳುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಮೂವರು ಕಾಶ್ಮೀರ ಮೂಲದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com