ಪಾಕಿಸ್ತಾನ್ ಜಿಂದಾಬಾದ್ ಎಂದ ಯುವತಿ ಮೇಲೆ ಬಿತ್ತು ದೇಶದ್ರೋಹ ಪ್ರಕರಣ!

ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಪಾಕ್ ಪ್ರೇಮಿ ಯುವತಿ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಪಾಕ್ ಪ್ರೇಮಿ ಯುವತಿ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಮಾಧ್ಯಮಗಳು ವರದಿ ಮಾಡಿದ್ದು, ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು, ಐಪಿಸಿ ಸೆಕ್ಷನ್ 124ಎ (ದೇಶದ್ರೋಹ), 153 (ಎ) (ಎರಡು ಗುಂಪುಗಳ ನಡುವೆ ಶತೃತ್ವ ಬಿತ್ತುವುದು) 153 (ಬಿ) (ಭಾವೈಕ್ಯತೆ, ರಾಷ್ಟ್ಪೀಯ ಐಕ್ಯತೆಗೆ ಧಕ್ಕೆ ತರುವುದು)ರ ಅಡಿ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಮೂಲ್ಯಳ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯ ವಿಡಿಯೋ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಎಂಐಎಂ ಮುಖ್ಯಸ್ಥ ಆಸಾದುದ್ದೀನ್ ಓವೈಸಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿ ವಿರೋಧಿಸಿ ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌, ಹಿಂದೂ-ಮುಸ್ಲಿಂ-ಸಿಖ್- ಈಸಾಯಿ ಫೆಡರೇಷನ್ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಯುವತಿಯೊಬ್ಬಳು ಪಾಕಿಸ್ತಾನ ಜಿಂದಾಬಾದ್ ಎಂದು ಪಾಕ್ ಪರ ಜೈಕಾರ ಕೂಗಿದ್ದಳು.

ಯುವತಿ ಅಮೂಲ್ಯ ಮಾತು ಆರಂಭಿಸುವ ಮುನ್ನವೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ವೇದಿಕೆ ಮೇಲೆ ಬಂದ ಚಿಕ್ಕಮಗಳೂರಿನ ಕೊಪ್ಪ ಮೂಲದ ಯುವತಿ ಅಮೂಲ್ಯ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದು, ಅಮೂಲ್ಯ ಈ ರೀತಿ ಘೋಷಣೆ ಕೂಗುತ್ತಿದ್ದಂತೆ ಓವೈಸಿ ಆಕೆಯನ್ನು ತಡೆದಿದ್ದಾರೆ. ಬಳಿಕ ಪೊಲೀಸರು ಕೂಡಲೇ ಅಮೂಲ್ಯಳನ್ನು ವೇದಿಕೆಯಿಂದ ಕರೆದುಕೊಂಡು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ರಹಸ್ಯ ಪ್ರದೇಶಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಪಾಕ್ ಪರ ಜೈಕಾರ ಕೂಗಿದ ಅಮೂಲ್ಯಳನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com