ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಎನ್ಆರ್_ಸಿ (National Register of Citizens) ವಿರೋಧಿ ಕಾರ್ಯಕ್ರಮದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಯುವತಿ ವಿರುದ್ಧ ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಕಿಡಿಕಾರಿದ್ದಾರೆ.
ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಇಂದು ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಅಸಾದುದ್ದೀನ್ ಒವೈಸಿ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು. ಈ ವೇಳೆ ವೇದಿಕೆಗೆ ಆಗಮಿಸಿದ್ದ ಯುವತಿ ಅಮೂಲ್ಯ ನೋಡ ನೋಡುತ್ತಿದ್ದಂತೆಯೇ ಮೈಕ್ ತೆಗೆದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದಳು.
ಅಮೂಲ್ಯ ಈ ರೀತಿ ಘೋಷಣೆ ಕೂಗುತ್ತಿದ್ದಂತೆ ವೇದಿಕೆ ಮೇಲಿದ್ದ ಓವೈಸಿ ಆಕೆಯನ್ನು ತಡೆದಿದ್ದಾರೆ. ಬಳಿಕ ಪೊಲೀಸರು ಕೂಡಲೇ ಅಮೂಲ್ಯಳನ್ನು ವೇದಿಕೆಯಿಂದ ಕರೆದುಕೊಂಡು ವಶಕ್ಕೆ ಪಡೆದ್ದಾರೆ. ಅಮೂಲ್ಯ ಪಾಕಿಸ್ತಾನಕ್ಕೆ ಜೈಕಾರ ಕೂಗುತ್ತಿದ್ದಂತೆ ಓವೈಸಿ ಗೊಂದಲ ಗೊಂಡರು.
ಈ ಮಾತನಾಡಿದ ಓವೈಸಿ, 'ನಾವೂ ಭಾರತೀಯರು, ನಾವೂ ಯಾವುದೇ ಕಾರಣಕ್ಕೂ ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುವುದಿಲ್ಲ. ಪಾಕಿಸ್ತಾನಕ್ಕೆ ನಾವೂ ಜೈಕಾರ ಹಾಕಲ್ಲ. ನಾವು ಆಕೆಯನ್ನು ಕಾರ್ಯಕ್ರಮಕ್ಕೆ ಕರೆದಿರಲಿಲ್ಲ. ಆಕೆ ಯಾಕೆ ಈ ರೀತಿ ಹೇಳಿದರು ಎಂಬುದು ನನಗೆ ಗೊತ್ತಿಲ್ಲ. ಆದರೆ ಈ ಘಟನೆಯ ಹಿಂದೆ ಯಾವುದೋ ಕಾಣದ ಕೈಗಳ ಕೈವಾಡವಿರಬಹುದು. ನಮ್ಮ ಸಿಎಎ ವಿರೋಧಿ ಪ್ರತಿಭಟನೆಯ ಹಾದಿ ತಪ್ಪಿಸಲು ಮಾಡಿರುವ ಹುನ್ನಾರ ಇದು ಎಂದು ಒವೈಸಿ ಆರೋಪಿಸಿದ್ದಾರೆ.
ಅಲ್ಲದೆ ಕಾರ್ಯಕ್ರಮದ ಆಯೋಜಕರ ವಿರುದ್ಧವೂ ಕಿಡಿಕಾರಿದ ಒವೈಸಿ, ಇಂತಹ ಗಂಭೀರ ಕಾರ್ಯಕ್ರಮ ಆಯೋಜನೆ ಮಾಡುವಾಗ ಆಯೋಜಕರು ಇಂತಹ ಘಟನೆಗಳ ಕುರಿತು ಮುಂಜಾಗ್ರತೆ ವಹಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement