ಅಶ್ಲೀಲ ಚಿತ್ರಗಳಿಗೆ 113 ಮಕ್ಕಳ ಬಳಕೆ ಪ್ರಕರಣ: ಪೊಲೀಸರಿಗೆ ಹೈಕೋರ್ಟ್ ತಪರಾಕಿ

ರಾಜ್ಯಾದ್ಯಂತ ಒಟ್ಟು 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೈಕೋರ್ಟ್, ಈ ಸಂಬಂಧ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳದೇ ಹೋದರೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರನ್ನೇ (ಡಿಜಿ- ಐಜಿಪಿ) ನ್ಯಾಯಾಲಯಕ್ಕೆ ಕರೆಯಸಬೇಕಾಗುತ್ತದೆ ಎಂದು ಎಚ್ಚರಿಸಿದೆ
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯಾದ್ಯಂತ ಒಟ್ಟು 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೈಕೋರ್ಟ್, ಈ ಸಂಬಂಧ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳದೇ ಹೋದರೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರನ್ನೇ (ಡಿಜಿ- ಐಜಿಪಿ) ನ್ಯಾಯಾಲಯಕ್ಕೆ ಕರೆಯಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ರಾಜ್ಯದಲ್ಲಿ ಬಾಲ ನ್ಯಾಯ (ಮಕ್ಕಳ ಕಾಳಜಿ ಹಾಗೂ ಸುರಕ್ಷತೆ) ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ಸ್ವಯಂ ಪ್ರೇರಿತ ಹಾಗೂ ಬಚಪನ್‌ ಬಚಾವೊ ಸ್ವಯಂ ಸೇವಾ ಸಂಸ್ಥೆ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಆದೇಶ ನೀಡಿತು.

ಈ ಹಿಂದೆ ತಿಳಿಸಿದ್ದಂತೆ, ರಾಜ್ಯದಲ್ಲಿ ಅಂಥ ಯಾವುದೇ ಪ್ರಕರಣಗಳು ನಡೆದಿಲ್ಲ. ಬಾಲಮಂದಿರದಲ್ಲಿ ಅಂತಹ ಮಕ್ಕಳು ಇದ್ದರೆಂಬ ಯಾವುದೇ ಮಾಹಿತಿ ಇಲ್ಲ ಎಂದು ನ್ಯಾಯಪೀಠಕ್ಕೆ ಸರ್ಕಾರಿ ವಕೀಲರು ತಿಳಿಸಿದರು.

ಅದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪೀಠ, ಪ್ರಕರಣದ ಬಗ್ಗೆ ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಕೋರ್ಟ್ ಎರಡು-ಮೂರು ಬಾರಿ ಆದೇಶ ನೀಡಿದೆ. ಆದರೆ, ಪೊಲೀಸರು ತನಿಖೆಯನ್ನೇ ನಡೆಸದೆ ಅಂಥ ಪ್ರಕರಣಗಳೇ ನಡೆದಿಲ್ಲ ಎಂದು ಹೇಳಿದರೆ ಒಪ್ಪಲು ಸಾಧ್ಯವಿಲ್ಲ. ತನಿಖೆ ನಡೆಸಲಾಗುವುದಿಲ್ಲ ಎಂದಾದರೆ ಹಿರಿಯ ಅಧಿಕಾರಿಗಳನ್ನೇ ಕೋರ್ಟ್​ಗೆ ಕರೆಸಬೇಕಾಗುತ್ತದೆ ಎಂದು ಕಟುವಾಗಿ ನುಡಿಯಿತು.

ಕೇಂದ್ರ ಸರ್ಕಾರದ ವರದಿಯ ಪ್ರಕಾರ 2018ರಲ್ಲಿ ಕರ್ನಾಟಕದಲ್ಲಿ 113 ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆದಿವೆ ಎಂದು ಗಂಭೀರ ಕಳವಳ ವ್ಯಕ್ತವಾಗಿದೆ. ಆದರೆ, ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಆಘಾತಕಾರಿಯಾದೆ. ಈ ಬಗ್ಗೆ ಪೊಲೀಸರೇಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ ಪೀಠ, ಈ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಸರ್ಕಾರಿ ವಕೀಲರಿಗೆ ತಾಕೀತು ಮಾಡಿ, ಜ.13ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com