ರಾಜಕೀಯ ನಾಯಕರೂ ಸೇರಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ 'ಹೈ' ಸೂಚನೆ

ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಸಾರ್ವಜನಿಕರು ಸೇರಿದಂತೆ ರಾಜಕಾರಣಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಸಾರ್ವಜನಿಕರು ಸೇರಿದಂತೆ ರಾಜಕಾರಣಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 

ಹೋರಾಟಗಾರ್ತಿ ಗೀತಾ ಮಿಶ್ರಾ ಹಾಗೂ ಲೆಟ್ಸ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ನ್ಯಾ.ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ. 

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಬಳ್ಳಾರಿಯಲ್ಲಿ ನಡೆದ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರ ಪುತ್ರನ ಮದುವೆ ಸಮಾರಂಭದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ಭಾವಹಿಸಿದ ಇತರರು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತಲವೂ ಕಾಯ್ದುಕೊಂಡಿರಲಿಲ್ಲ. ಇನ್ನೂ ರಾಜಕೀಯ ಪಕ್ಷಗಳ ರ್ಯಾಲಿಯಲ್ಲಿ ಮತ್ತು ಇತ್ತೀಚೆಗೆ ನಡೆದ ಕೆಂಪೇಗೌಡ ಪುತ್ಥಳಿ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿಯೂ ರಾಜಕಾರಣಿಗಳು ಇದೇ ರೀತಿ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಆದರೆ, ಅವರ ವಿರುದ್ಧ ವಿಪತ್ತು ನಿರ್ಹವಣಾ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಲ್ಲ ಎಂದು ದೂರಿದರು. 

ಇದನ್ನು ಪರಿಗಣಿಸಿದ ನ್ಯಾಯಪೀಠ, ಮಾರ್ಗಸೂಚಿ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಏಕೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಲ್ಲ? ರಾಜಕಾರಣಿಗಳ ಹಾಗೂ ವಿಐಪಿಗಳು ಎಂದ ಮಾತ್ರಕ್ಕೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದೆ ಸರ್ಕಾರ ಕೈಕಟ್ಟಿ ಕೂರಬಾರದು. ಪ್ರಬಾವಿಗಳೆಂದು ತಾರತಮ್ಯ ಮಾಡುವುದು ಸರಿಯಲ್ಲ. ಎಷ್ಟೇ ಪ್ರಭಾವಿಯಾದರೂ ಮಾರ್ಗಸೂಚಿ ಉಲ್ಲಂಘಿಸಿದರೆ ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತು. 

ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಏಕೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯ ಕ್ರಮ ಜರುಗಿಸಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆಯೂ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com