ವೀರಶೈವ ಲಿಂಗಾಯತ ನಿಗಮ ಸ್ಥಾಪನೆ: ಅಧಿವೇಶನ ಮುಗಿಯುವುದರೊಳಗೆ ತೀರ್ಮಾನ- ಶ್ರೀರಾಮುಲು

ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಬಗ್ಗೆ ಅಧಿವೇಶನ ಮುಗಿಯುವುದರೊಳಗೆ ಸಂಬಂಧಪಟ್ಟವರ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.
ಶ್ರೀರಾಮುಲು
ಶ್ರೀರಾಮುಲು

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಬಗ್ಗೆ ಅಧಿವೇಶನ ಮುಗಿಯುವುದರೊಳಗೆ ಸಂಬಂಧಪಟ್ಟವರ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಯಶವಂತರಾಯ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅನ್ನ ಮತ್ತು ಶಿಕ್ಷಣ ದಾಸೋಹವನ್ನು ಸಮಾಜಕ್ಕೆ ನೀಡಿರುವ ವೀರಶೈವ ಲಿಂಗಾಯತ ಸಮುದಾಯದಲ್ಲಿ ಅನೇಕ ಉಪ ಜಾತಿಗಳ ಜನರು ತೀರಾ ಬಡತನದಲ್ಲಿದ್ದಾರೆ. ಸದನದ ಅನೇಕ ಹಿರಿಯರ ಕಳಕಳಿ ಅರ್ಥವಾಗಿದೆ. ಪ್ರತ್ಯೇಕ ನಿಗಮ ಸ್ಥಾಪನೆ ಸಂಬಂಧ ಅಧಿವೇಶನ ಮುಗಿಯುವುದರೊಳಗೆ ಈ ಸಮುದಾಯದ ಮುಖಂಡರೊಂದಿಗೆ ಹಾಗೂ ಸಂಬಂಧಪಟ್ಟವರ ಸಭೆ ಕರೆದು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಯಶವಂತರಾಯ ಪಾಟೀಲ್, ವೀರಶೈವ ಲಿಂಗಾಯತ ಸಮುದಾಯವನ್ನು ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ತರಲಾಗಿದೆ. 2019-20ನೇ ಸಾಲಿನಡಿ ಈ ನಿಗಮಕ್ಕೆ 14.80 ಕೋಟಿ ರೂ. ನೀಡಲಾಗಿದೆ. ವೀರಶೈವ ಲಿಂಗಾಯತ ಸಮುದಾಯದಲ್ಲಿ ನೂರಾರು ಉಪ ಜಾತಿಗಳಿಗೆ. ಈ ಅನುದಾನ ಸಾಕಾಗುವುದಿಲ್ಲ. ಆದ್ದರಿಂದ ಪ್ರತ್ಯೇಕ ನಿಗಮ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿಯವರೇ ಉತ್ತರ ನೀಡಬೇಕು ಎಂದು ಉತ್ತರಿಸಿದರು.

ಕಾಂಗ್ರೆಸ್‌ನ ಈಶ್ವರ್ ಖಂಡ್ರೆ ಮಾತನಾಡಿ, ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆ ಹೊಂದಿರುವ ವೀರಶೈವ ಲಿಂಗಾಯತ ಸಮುದಾಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದೆ. ಈಗಲೂ ನೂರಾರು ಉಪಜಾತಿಗಳು ಅತ್ಯಂತ ಕಡುಬಡತನದಲ್ಲಿವೆ. ಹಿಂದುಳಿದ ನಿಗಮದಡಿ ಸರಿಯಾದ ಅನುದಾನ ಬಿಡುಗಡೆಯಾಗುತ್ತಿಲ್ಲ. ಆದ್ದರಿಂದ ಈ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಈ ವಿಷಯದಲ್ಲಿ ಚರ್ಚೆ ನಡೆಸಲು ಅರ್ಧ ಗಂಟೆ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಕೆ.ಅನ್ನದಾನಿ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರನ್ನು ಹೊರತುಪಡಿಸಿದರೆ ಉಳಿದೆಲ್ಲಾ ಜಾತಿಗಳು ಹಿಂದುಳಿದ ಅಭಿವೃದ್ಧಿ ನಿಗಮದಡಿ ಬರುತ್ತದೆ. ಈ ನಿಗಮಕ್ಕೆ ಕೇವಲ 250 ಕೋಟಿ ರೂ. ನೀಡಲಾಗುತ್ತದೆ. ಆದ್ದರಿಂದ ಪ್ರತ್ಯೇಕ ನಿಗಮ ಸ್ಥಾಪಿಸುವುದು ಅಗತ್ಯ ಎಂದರು.

ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಇದು ಅತ್ಯಂತ ಸಮರ್ಪಕ ಬೇಡಿಕೆಯಾಗಿದೆ. ಆದ್ದರಿಂದ ಅರ್ಧಗಂಟೆ ಚರ್ಚೆ ನಡೆಸಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com