ಪ್ರವಾಸಿತಾಣಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ

ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ
ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದೆ. ಈಗಾಗಲೇ ಡಾ. ಸುಧಾಮೂರ್ತಿಯವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿ ಎಲ್ಲಾ ಕಡೆ ಈ ಸಮಿತಿ ಭೇಟಿ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ, ಕೆಲಸ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೂ ಮೊದಲು ನಿರಂಜನ್ ಕುಮಾರ್ ಮಾತನಾಡಿ, ಚಾಮರಾಜನಗರ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದದ್ದು, ಆದರೆ ಅನೇಕ ಪ್ರವಾಸಿ ತಾಣಗಳಿಗೆ ಅನುದಾನ ಕೊಟ್ಟಿಲ್ಲ. ವಿಶ್ವವಿಖ್ಯಾತ ಬಂಡೀಪುರ ಅರಣ್ಯ ಇದೇ ಪ್ರದೇಶದಲ್ಲಿದೆ. ಅಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ. ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಎರಡು ವರ್ಷಗಳಿಂದ ಒಂದು ರೂಪಾಯಿ ಅನುದಾನ ಸಿಕ್ಕಿಲ್ಲ. ಆದ್ದರಿಂದ ಈ ಬಾರಿ ವಿಶೇಷ ಅನುದಾನ ಕೊಡಬೇಕು ಎಂದು ಮನವಿ ಮಾಡಿದರು.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉತ್ತರಿಸಿ, 2015-20ರಲ್ಲಿ 319 ಪ್ರವಾಸಿತಾಣಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಕನಕಗಿರಿ, ಚಿಕ್ಕೊಳೆ ಜಲಾಶಯ, ಬಂಡೀಪುರ, ಕೊಳ್ಳೆಗಾಲದ ಹೊಗೇನಕಲ್‌ ಮುಂತಾದ ಕೆಲವು ತಾಣಗಳನ್ನು ಗುರುತಿಸಲಾಗಿದೆ. ಈ ಕ್ಷೇತ್ರಕ್ಕೆ ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿಗೆ 17.33 ಕೋಟಿ ಮಂಜೂರು ಮಾಡಿದೆ. ಸದಸ್ಯರ ಬೇಡಿಕೆ ಸರಿಯಿದೆ. ಅಲ್ಲಿಗೆ ಬಂದು ಅಗತ್ಯ ಇರುವ ಅನುದಾನ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪ್ರವಾಸೋದ್ಯಮ ಇಲಾಖೆಗೆ ಕ್ಯಾಪಿಟಲ್ ಹೆಡ್‌ ಕೇವಲ 20 ಕೋಟಿ ರೂ. ಮಾತ್ರವಿದೆ. ಹೆಚ್ಚುವರಿ ಅನುದಾನ ಕೊಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇವೆ. ಹೆಚ್ಚುವರಿ ಅನುದಾನ ನೀಡಿದರೆ ಅನುದಾನ ಕೊಡಲು ಪ್ರಯತ್ನಿಸುತ್ತೇನೆ ಎಂದರು.

ಎಚ್‌.ಕೆ.ಕುಮಾರಸ್ವಾಮಿ ಕೇಳಿದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ಸಕಲೇಶಪುರದ ಮಂಜ್ರಾಬಾದ್ ಕೋಟೆ ಕೇಂದ್ರ ಪುರಾತತ್ವ ಇಲಾಖೆಗೆ ವ್ಯಾಪ್ತಿಗೆ ಒಳಪಡುತ್ತದೆ. ಅಲ್ಲಿ ಕಟ್ಟಡ ನಿರ್ಮಾಣ ಸಾಧ್ಯವಿಲ್ಲ. ಇಂತಹ ಜಾಗದಲ್ಲಿ ಮೊಬೈಲ್ ಟಾಯ್ಲೆಟ್‌ ವ್ಯವಸ್ಥೆಯನ್ನೂ ಮಾಡಲಾಗುವುದು. ಮಾತ್ರವಲ್ಲ ನಿಯಮ ಸಡಿಲಿಸಲು ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಭರವಸೆ ನೀಡಿದರು. ಮಂಜ್ರಾಬಾದ್‌ ಕೋಟೆಗೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಲ್ಲಿಗೆ ಮೂಲಭೂತ ಸೌಲಭ್ಯ ಒದಗಿಸಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com