ಹೊಸ ಕಾಮಗಾರಿ ಪ್ರಾರಂಭಿಸಲು ಆರ್ಥಿಕ ಇಲಾಖೆಯ ಅನುಮತಿ ಕಡ್ಡಾಯ: ಗೋವಿಂದ ಎಂ ಕಾರಜೋಳ

ಪ್ರಸಕ್ತ ಸಾಲಿನಲ್ಲಿ ಯಾವುದೇ ನೂತನ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕಡ್ಡಾಯವಾಗಿ ಆರ್ಥಿಕ ಇಲಾಖೆಯ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಲೋಕೋಯೋಗಿ ಇಲಾಖೆಯ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.
ಫಲಾನುಭವಿಗಳಿಗೆ ತಾತ್ಕಾಲಿಕ ಪರಿಹಾರ ನೀಡಿದ ಗೋವಿಂದ ಎಂ ಕಾರಜೋಳ
ಫಲಾನುಭವಿಗಳಿಗೆ ತಾತ್ಕಾಲಿಕ ಪರಿಹಾರ ನೀಡಿದ ಗೋವಿಂದ ಎಂ ಕಾರಜೋಳ

ವಿಜಯಪುರ: ಪ್ರಸಕ್ತ ಸಾಲಿನಲ್ಲಿ ಯಾವುದೇ ನೂತನ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕಡ್ಡಾಯವಾಗಿ ಆರ್ಥಿಕ ಇಲಾಖೆಯ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಲೋಕೋಯೋಗಿ ಇಲಾಖೆಯ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ವಿಜಯಪುರದ ಪ್ರವಾಸಿ ಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು. ಕಳೆದ ವರ್ಷದಲ್ಲಿ ಅನಾವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಾಮಗಾರಿ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯು ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿ ರಸ್ತೆ ನಿರ್ಮಾಣ, ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸಿ, ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಬೇಕು. ಎಸ್‍ಎಸ್‍ಎಲ್ ಸಿ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆಯುತ್ತಿರುವ ಆನ್‍ಲೈನ್ ತರಬೇತಿಯನ್ನು ಉತ್ತಮ ಗುಣಮಟ್ಟದಲ್ಲಿ ನೀಡಿ, ವಿದ್ಯಾರ್ಥಿಗಳ ಅಭ್ಯಾಸದ ಗುಣಮಟ್ಟದ ಕಡೆ ಹೆಚ್ಚು ಗಮನ ಹರಿಸಿ, ಶೇ. 100 ರಷ್ಟು ಫಲಿತಾಂಶ ಬರುವಂತೆ ಶ್ರಮವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ನಿಗಮಗಳು ಫಲಾನುಭವಿಗಳ ವಿವರವನ್ನು ಒದಗಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಗಳು ದೊರಕುವಂತೆ ಕ್ರಮಕೈಗೊಳ್ಳಬೇಕು. ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸಾಧಕರಾಗಿರುವವ ಮಾಹಿತಿಯನ್ನೂ ಸಂಗ್ರಹಿಸಿ, ಅವರಿಂದ ಇತರರು ಪ್ರೇರೇಪಿತವಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

5 ಸಾವಿರ ರೂ ತಾತ್ಕಾಲಿಕ ಪರಿಹಾರ ಬಿಡುಗಡೆ: ಕೋವಿಡ್19 ನಿಂದ ಸಂಕಷ್ಟದಲ್ಲಿರುವ ರಸ್ತೆ ಬದಿ ಹೊಟೇಲ್, ಬಸ್ ನಿಲ್ದಾಣಗಳ ಮುಂಭಾಗ ಕುಳಿತು ಪಾದರಕ್ಷೆ ಮತ್ತು ಇತರ ಚರ್ಮ ವಸ್ತುಗಳ ದುರಸ್ತಿ ಹಾಗೂ ಪಾಲೀಷ್ ಮಾಡುವ ಕಾರ್ಯದಲ್ಲಿ ತೊಡಗಿರುವ ಚರ್ಮ ಕುಶಲಕರ್ಮಿ ಫಲಾನುಭವಿಗಳಿಗೆ 5 ಸಾವಿರ ರೂ. ತಾತ್ಕಾಲಿಕ ಪರಿಹಾರವನ್ನು ವಿತರಿಸಿದರು. ರಾಜ್ಯದಲ್ಲಿ 11,772 ಕುಶಲಕರ್ಮಿಗಳಿಗೆ ತಾತ್ಕಾಲಿಕ ಪರಿಹಾರವನ್ನು ವಿತರಿಸಲಾಗುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com