ಕೊಡಗು, ಮೈಸೂರು ಜಿಲ್ಲಾ ವ್ಯಾಪ್ತಿಗೆ ಪ್ರತ್ಯೇಕ ಎಸ್ ಡಿಆರ್ ಎಫ್ ತಂಡ: ಬಸವರಾಜ ಬೊಮ್ಮಾಯಿ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪದೇ ಪದೇ ಪ್ರಕೃತಿ ವಿಕೋಪ ಸಂಭವಿಸುತ್ತಿದ್ದು, ಆ ದಿಸೆಯಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲಾ ವ್ಯಾಪ್ತಿಗೆ ಪ್ರತ್ಯೇಕ ಎಸ್ ಡಿಆರ್ ಎಫ್ ತಂಡ ನಿಯೋಜಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ

ಮಡಿಕೇರಿ: ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪದೇ ಪದೇ ಪ್ರಕೃತಿ ವಿಕೋಪ ಸಂಭವಿಸುತ್ತಿದ್ದು, ಆ ದಿಸೆಯಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲಾ ವ್ಯಾಪ್ತಿಗೆ ಪ್ರತ್ಯೇಕ ಎಸ್ ಡಿಆರ್ ಎಫ್ ತಂಡ ನಿಯೋಜಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಗೃಹ ಸಚಿವರು, ಈ ಸಂಬಂಧ ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಲಾಗಿದೆ ಎಂದರು. 

ರಾಜ್ಯದ ಗಡಿ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ನಿಗ್ರಹಿಸಲು ಪೊಲೀಸ್ ಇಲಾಖೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ನಕ್ಸಲ್ ನಿಗ್ರಹ ಹೆಚ್ಚಿನ ಶಿಬಿರ ತೆರೆಯಲು ಉದ್ದೇಶಿಸಲಾಗಿದೆ. ಈಗಾಗಲೇ ಎರಡು ನಕ್ಸಲ್ ನಿಗ್ರಹ ಕ್ಯಾಂಪ್ ಗಳಿದ್ದು, ಮತ್ತೊಂದು ತಂಡ ನಿಯೋಜಿಸಲು ಗೃಹ ಇಲಾಖೆಯಿಂದ ಒಪ್ಪಿಗೆ ನೀಡಲಾಗಿದೆ ಎಂದರು. 

ಕಾಡಾನೆ ಹಾವಳಿಯಿಂದ ಮೃತಪಟ್ಟ ಕುಟುಂಬದವರಿಗೆ ಹೆಚ್ಚಿನ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು, ಅರಣ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಹೆಚ್ಚಿನ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು. 

ಮಾದಕ ದ್ರವ್ಯ ಸಾಗಣೆ ತಡೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಗೋ ಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಹೆಚ್ಚಿನ ನಿಗಾ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಈ ಸಂಬಂಧ ತಪಾಸಣಾ ತಂಡ ನಿಯೋಜಿಸಲು ಉದ್ದೇಶಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಪೇದೆ, ಡಿಆರ್ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸದ್ಯ ಈ ಬಾರಿ ಶೇ.70 ರಷ್ಟು ಹುದ್ದೆ ಮತ್ತು ಮುಂದಿನ ವರ್ಷ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವರು ಹೇಳಿದರು. 

ಜಿಲ್ಲೆಗಳ ಹೋಂ ಸ್ಟೇಗಳಿಗೆ ಸಂಬಂಧಿಸಿದಂತೆ ಮಾಹಿತಿ ಇದ್ದು, ಪ್ರತಿಯೊಂದು ಹೋಂ ಸ್ಟೇಗಳು ನೋಂದಣಿ ಮಾಡಿಕೊಳ್ಳಬೇಕು. ಅನಧಿಕೃತ ಹೋಂ ಸ್ಟೇಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು. 

ಕೊಡಗು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆ ಬೆಟ್ಟಗುಡ್ಡ ಪ್ರದೇಶವಾದ್ದರಿಂದ ಪೊಲೀಸ್ ಇಲಾಖೆಗೆ ಹೊಸ ವಾಹನಗಳಿಗೆ ಬೇಡಿಕೆ ಇದ್ದು, ಅದನ್ನು ಒದಗಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಹಳೆಯದಾಗಿದ್ದು, 10 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸುವಂತೆ ತಿಳಿಸಲಾಗಿದೆ ಎಂದರು. 

ಕೊಡಗು ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಅಲ್ಲಲ್ಲಿ ಮನೆಗಳಿದ್ದು, ಪೊಲೀಸರು ಸಮುದಾಯದ ಜೊತೆ ಸಂಪರ್ಕ ಇಟ್ಟು ಯಾವುದೇ ರೀತಿಯ ಅಪರಾಧ ಪ್ರಕರಣಗಳು ನಡೆಯದಂತೆ ಎಚ್ಚರವಹಿಸಲು ಸೂಚಿಸಲಾಗಿದೆ ಎಂದರು. 

ಪ್ರಕೃತಿ ವಿಕೋಪ, ಭೂಕುಸಿತ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಇತರೆ ಇಲಾಖೆಯ ಜೊತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದೆ. ಹಾಗೆಯೇ ಕೋವಿಡ್ ಸಂದರ್ಭದಲ್ಲಿ ಪೊಲೀಸರು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
 
ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರಥಮ ಆಧ್ಯತೆಯಾಗಿದೆ. ಆ ನಿಟ್ಟಿನಲ್ಲಿ ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು. 

ಐಜಿಪಿ ವಿಫುಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಡಿವೈಎಸ್ಪಿಾಗಳಾದ ದಿನೇಶ್ ಕುಮಾರ್, ಶೈಲೇಂದ್ರ, ಜಯಕುಮಾರ್, ಇತರರು ಇದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com