2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಸೂಕ್ತ ಸಿದ್ಧತೆಗೆ ಆಯೋಗ ಸೂಚನೆ
ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಸೂಕ್ತ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಡಾ.ಬಿ. ಬಸವರಾಜು ಸೂಚಿಸಿದ್ದಾರೆ.
Published: 17th November 2020 08:34 PM | Last Updated: 17th November 2020 08:34 PM | A+A A-

ಸಾಂದರ್ಭಿಕ ಚಿತ್ರ
ಹಾಸನ: ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಸೂಕ್ತ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಡಾ.ಬಿ. ಬಸವರಾಜು ಸೂಚಿಸಿದ್ದಾರೆ.
ಬಸವರಾಜು ಅವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿಯಾಗದಂತೆ ಹಾಗೂ ಸಿಬ್ಬಂದಿಗಳ ಕೊರತೆಯಾಗದಂತೆ ಯೋಜಿಸಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಕೊರೋನಾ ಸಂದರ್ಭದಲ್ಲಿ ಚುನಾವಣೆ ನಡೆಸುವುದೇ ಒಂದು ರೀತಿಯ ಸವಾಲಾಗಿದೆ. ಆದರೆ ಗ್ರಾಮ ಪಂಚಾಯ್ತಿಯು ಪ್ರಜಾ ಪ್ರಭುತ್ವದ ಮೂಲ ಅಡಿಪಾಯವಾಗಿದೆ. ಹಾಗಾಗಿ ಎಲ್ಲಾ ಸೂಕ್ಷ್ಮ ವಿಷಯಗಳ ಮೇಲೂ ಹೆಚ್ಚಿನ ಗಮನಹರಿಸಿ, ಯಾವುದೇ ಲೋಪಗಳಿಲ್ಲದಂತೆ ನ್ಯಾಯಯುತವಾಗಿ ಚುನಾವಣೆ ನಡೆಸಲು ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು ಎಂದು ಹೇಳಿದರು.
ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕಳೆದ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಆಯೋಗ ಚುನಾವಣೆಗೆ ಸಿದ್ಧತೆ ನಡೆಸಿದೆ.