ಗ್ರಾಮ ಒನ್ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರುವ ಗ್ರಾಮ -1 ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಆನ್ ಲೈನ್ ಮೂಲಕ ಚಾಲನೆ ನೀಡಿದರು.
Published: 19th November 2020 07:18 PM | Last Updated: 19th November 2020 07:18 PM | A+A A-

ಗ್ರಾಮ ಒನ್ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ಬೆಂಗಳೂರು: ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರುವ ಗ್ರಾಮ -1 ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಆನ್ ಲೈನ್ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಗ್ರಾಮ ಒನ್ ಕೇಂದ್ರಗಳಲ್ಲಿಯೇ ಸಾರ್ವಜನಿಕರು ಸರ್ಕಾರಿ ಸೇವೆಗಳನ್ನು ಪಡೆಯಬಹುದಾಗಿದ್ದು, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿರುವುದಿಲ್ಲ ಎಂದರು. ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಪಡೆಯುವ ಮೂಲಕ ಸಾರ್ವಜನಿಕರು ತಮ್ಮ ಸಮಯ ಮತ್ತು ಹಣವನ್ನು ಉಳಿಸಬಹುದಾಗಿದೆ. ಮಧ್ಯವರ್ತಿಗಳ ಹಾವಳಿಯನ್ನು ಈ ಕೇಂದ್ರಗಳ ಸ್ಥಾಪನೆಯಿಂದ ತಪ್ಪಿಸಬಹುದಾಗಿದೆ ಎಂದು ವಿವರಿಸಿದರು.
ಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮ ಒನ್ ಕೇಂದ್ರವು ಬೆಳಿಗ್ಗೆ ಎಂಟು ಗಂಟೆಯಿಂದ ರಾತ್ರಿ ಎಂಟು ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಮೈಕ್ರೋ-ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಮತ್ತಷ್ಟು ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳಲ್ಲಿ ನೀಡಲು ಉದ್ದೇಶಿಸಿದೆ. ಸರ್ಕಾರಿ ಸೇವೆಗಳು ಸಕಾಲಕ್ಕೆ ನಾಗರಿಕರಿಗೆ ತಲುಪಬೇಕೆನ್ನುವ ಸದಾಶಯದೊಂದಿಗೆ ಸಕಾಲ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಸಮಯಬದ್ಧ ಸೇವೆಗಳನ್ನು ತಂತ್ರಜ್ಞಾನದ ಬಳಕೆಯಿಂದ ನೀಡಲು ಸಾಧ್ಯವಿರುವುದರಿಂದ ಗ್ರಾಮ- ಒನ್ ಕೇಂದ್ರಗಳು ಜನಸ್ನೇಹಿ ಕೇಂದ್ರಗಳಾಗುವುದರಲ್ಲಿ ಸಂಶಯವಿಲ್ಲ. ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ದಾವಣಗೆರೆಯ ಜಿಲ್ಲೆಯ ಮಾಯಗೊಂಡನಹಳ್ಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಅವರು ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಜಿಲ್ಲೆಯ ಶಾಸಕರು, ಜನ ಪ್ರತಿನಿಧಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.