ಕೋವಿಡ್ ನಿಯಮ ಉಲ್ಲಂಘನೆ: ರಾಜಕಾರಣಿಗಳ ವಿರುದ್ಧ ಮತ್ತೆ ಹೈಕೋರ್ಟ್ ಕಿಡಿ
ರಾಜಕೀಯ ಪಕ್ಷಗಳ ರ್ಯಾಲಿ ಹಾಗೂ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸುತ್ತಿರುವುದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೈಕೋರ್ಟ್ ಕಿಡಿಕಾರಿದ್ದು, ಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.
Published: 20th November 2020 08:18 AM | Last Updated: 20th November 2020 08:41 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜಕೀಯ ಪಕ್ಷಗಳ ರ್ಯಾಲಿ ಹಾಗೂ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸುತ್ತಿರುವುದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೈಕೋರ್ಟ್ ಕಿಡಿಕಾರಿದ್ದು, ಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಸೇರಿ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ನ.24ಕ್ಕೆ ಮುಂದೂಡಿತು.
ಗುರುವಾರ ಮತ್ತೆ ಅರ್ಜಿ ವಿಚಾರಣೆ ಬಂದ ವೇಳೆ ರಾಜಕೀಯ ಪಕ್ಷಗಳ ರ್ಯಾಲಿ ಹಾಗೂ ಕಾರ್ಯಕ್ರಮಗಳಲ್ಲಿ ರಾಜಕಾರಣಿಗಳು ಮಾಸ್ಕ ಧರಿಸುತ್ತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಆದರೂ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಸರ್ಕಾರವನ್ನು ಮುಖ್ಯ ನ್ಯಾಯಮೂರ್ತಿ ಓಕಾ ಪ್ರಶ್ನಿಸಿದರು.
ಸರ್ಕಾರಿ ವಕೀಲ ವಿಕ್ರಮ್ ಹುಯಿಲುಗೋಳ ಉತ್ತರಿಸಿ, ಮಾಸ್ಕ್ ಹಾಕದವರನ್ನು ಜೈಲಿಗೆ ಕಳುಹಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಈ ಬಗ್ಗೆ ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ದಂಡಕಟ್ಟಿಸಿಕೊಳ್ಳಲು ಅವಕಾಶವಿರುವಂತೆ ತಿದ್ದುಪಡಿ ತರಲಾಗುವುದು. ರಾಜಕೀಯ ಪಕ್ಷಗಳ ರ್ಯಾಲಿಗಳಲ್ಲಿ ಭಾಗವಹಿಸಿ ಕೋವಿಡ್-19 ನಿಯಮ ಉಲ್ಲಂಘಿಸಿದ ಒಟ್ಟು 680 ಜನರಿಗೆ ದಂಡ ವಿಧಿಸಲಾಗಿದೆ. ನಿಯಮ ಉಲ್ಲಂಘಿಸಿದ ರಾಜಕಾರಣಿಗಳಿಗೂ ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅದಕ್ಕೆ ಅಸಮಾಧಾನಗೊಂಡ ಮುಖ್ಯ ನ್ಯಾಯಮೂರ್ತಿಗಳು, ರಾಜ್ಯ ಸರ್ಕಾರ ಜನ ಸಾಮಾನ್ಯರು ಮತ್ತು ರಾಜಕಾರಣಿಗಳು ನಡುವೆ ತಾರತಮ್ಯ ನಡೆಸುತ್ತಿದೆ. ಕಾನೂನಿನಿಂದ ಕೆಲವರಿಗೆ ವಿನಾಯಿತಿ ನೀಡಲಾಗುತ್ತಿದೆ. ತೇಜಸ್ವಿ ಸೂರ್ಯ ಅವರ ರ್ಯಾಲಿ ಕಳೆದ ಸೆಪ್ಟೆಂಬರ್ ನಲ್ಲಿ ನಡೆದಿದೆ. ಆದರೆ, ಈ ವರೆಗೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಿಲ್ಲ.ನಂತರ ರಾಜಕೀಯ ಪಕ್ಷಗಳ ರ್ಯಾಲಿಗಳಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಆದರೂ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸುವಲ್ಲಿ ಸರ್ಕಾರ ವಿಫಲವಾಗಿದೆ.
ರಾಜಕೀಯ ಪಕ್ಷಗಳು ಸರ್ಕಾರದ ಅಡಿಯಲ್ಲಿ ಬರುವುದಿಲ್ಲ. ಆದ್ದರಿಂದ ಅರ್ಜಿಯಲ್ಲಿ ರಾಜ್ಯದಲ್ಲಿ ಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳ ಪಟ್ಟಿಯಲ್ಲಿ ಸೇರಿಸಿ, ಅವುಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿ ವಿವರಣೆ ಪಡೆಯಲಾಗುವುದು ಎಂದು ಅರ್ಜಿದಾರ ವಕೀಲ ಪುತ್ತಿಗೆ ರಮೇಶ್ ಅವರಿಗೆ ನ್ಯಾಯಪೀಠ ಸೂಚಿಸಿತು.