ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಕಲಬುರಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. 
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗಿ
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗಿ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಕಲಬುರಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. 

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ  ದತ್ತಾತ್ರೇಯ ಪಾಟೀಲ್ ರೇವೂರ್, ಸಂಸದ ಡಾ. ಉಮೇಶ ಜಾಧವ್, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಅವರು, ಆಗಸ್ಟ್ 15 ರಂದು ದೇಶಕ್ಕೆ ಸ್ವಾತಂತ್ರ್ಯ ದೊರೆತರು, ದೇಶಾದ್ಯಂತ ಹಬ್ಬಿದ್ದ ನೂರಾರು ರಾಜಸಂಸ್ಥಾನಗಳನ್ನು ಏಕೀಕರಣಗೊಳಿಸಿ ಸರ್ದಾರ್ ವಲ್ಲಭಬಾಯಿ ಪಟೇಲ್  ಭಾರತ ಒಕ್ಕೂಟದ ನಿರ್ಮಾತೃ ಎನಿಸಿದರು. ಹೈದ್ರಾಬಾದ್ ನಿಜಾಮರ ಶೋಷಣೆಯಿಂದ ಈ ಪ್ರದೇಶವನ್ನು ಮುಕ್ತಗೊಳಿಸಲು ಹೋರಾಡಿದ ಎಲ್ಲಾ ಮಹನೀಯರ ತ್ಯಾಗ, ಬಲಿದಾನವನ್ನು ಸ್ಮರಿಸುವುದಾಗಿ ತಿಳಿಸಿದರು.

ಕಳೆದ ವರ್ಷ ಬಿಜೆಪಿ ಸರ್ಕಾರ  ಅಸ್ವಿತ್ವಕ್ಕೆ  ಬಂದ ಕೂಡಲೇ ಹೈದ್ರಾಬಾದ್ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿ ಬಹುಜನರ ಒತ್ತಾಸೆಯನ್ನು ಈಡೇರಿಸಲಾಗಿದೆ. ಪ್ರಾದೇಶಿಕ ಅಸಮಾನತೆ ತಡೆಗಟ್ಟಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯನ್ನು ರಚಿಸಿ ಈ ಭಾಗದ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಕೈಗಾರಿಕೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ಉದ್ಯೋಗ ಸೃಷ್ಟಿಗೆ ಬದ್ದವಾಗಿದ್ದೇವೆ. ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ವಸತಿ ಸೌಕರ್ಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ ನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 600 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಉದ್ಘಾಟಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಲ್ಯಾಣ ಕರ್ನಾಟಕದ ಅಭಿವೃದ್ದಿಯ ಕನಸುಗಾರರಾಗಿದ್ದು, ಈ ಪ್ರದೇಶವನ್ನು ಮಾದರಿ ಪ್ರದೇಶವನ್ನಾಗಿ ಮಾಡುವ ಮನೋಭಾವ ಹೊಂದಿದ್ದಾರೆ. ಅದಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ   ಒದಗಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ 30 ಕೋಟಿ ವೆಚ್ಚದಲ್ಲಿ ವಸತಿ ಶಾಲೆ ಮತ್ತು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಇದಕ್ಕೂ ಮೊದಲು ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಪೋಲೀಸ್ ಬ್ಯಾಂಡ್ ವೃಂದದಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com