

ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.
ಮೈಸೂರಿಗೆ ಭೇಟಿ ನೀಡುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಗಿಂದು ಭೇಟಿ ನೀಡುತ್ತಿದ್ದೇನೆ. ಅಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ. ಇದೇ ರೀತಿ ಹೆಚ್ಚು ಸೋಂಕಿರುವ ಗಡಿ ಜಿಲ್ಲೆಗಳಿಗೂ ಶೀಘ್ರದಲ್ಲೇ ಭೇಟಿ ನೀಡಲು ನಿರ್ಧರಿಸಿದ್ದು, ಪರಿಸ್ಥಿತಿ ಪರಿಶೀಲನೆ ನಡೆಸುತ್ತೇನೆಂದು ಹೇಳಿದ್ದಾರೆ.
ಬಳಿಕ ಮೈಸೂರು ಪ್ರವಾಸ ಕುರಿತು ಮಾಹಿತಿ ನೀಡಿದ ಅವರು ಮೈಸೂರು ಭೇಟಿ ವೇಳೆ ಚಾಮುಂಡೇಶ್ವರಿ ದೇವಾಲಯ ಹಾಗೂ ಸುತ್ತೂರು ಮಠಕ್ಕೂ ಭೇಟಿ ನೀಡುತ್ತೇನೆಂದು ತಿಳಿಸಿದ್ದಾರೆ.
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ
ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ್, ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ ಸಾಥ್ ನೀಡಿದ್ದರು.