ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನವದೆಹಲಿ: ಸರ್ವೋಚ್ಛ ನ್ಯಾಯಾಲಯದಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಬೆಳಿಗ್ಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆದಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.
ವಿಶೇಷ ರಜೆ ಅರ್ಜಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥ ಮಾಡಲು ತೀರ್ಮಾನಿಸಲಾಗಿದೆ ಎಂದ ಅವರು ತಮಿಳುನಾಡು ನದಿ ಜೋಡಣೆ ಯೋಜನೆಗಳು ಕಾನೂನು ಬಾಹಿರವಾಗಿದ್ದು, ಆ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ನಮ್ಮ ನಿಲುವನ್ನು ಸ್ಪಷ್ಟಪಡಿಸುವ ಕುರಿತು ಹಾಗೂ ತಮಿಳುನಾಡು ಮಧುರೈ ನ್ಯಾಯಾಲಯದಲ್ಲಿ ಪ್ರಕರಣವೊಂದು ದಾಖಲಾಗಿದೆ. ಪ್ರಕರಣ ಮಧುರೈ ವ್ಯಾಪ್ತಿಗೆ ಒಳಪಡದಿರುವುದರಿಂದ ಪ್ರಕರಣವನ್ನು ಕೈಬಿಡಲು ಕ್ರಮ ವಹಿಸಲಾಗುವುದು ಎಂದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ