ಜಿಎಸ್ ಟಿ ಪರಿಹಾರ ಇನ್ನೂ 3 ವರ್ಷ ಮುಂದುವರೆಸಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಬೊಮ್ಮಾಯಿ ಮನವಿ

ಜಿಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸಬೇಕು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನಿರ್ಮಲಾ ಸೀತಾರಾಮನ್ ರೊಂದಿಗೆ ಸಿಎಂ ಬೊಮ್ಮಾಯಿ
ನಿರ್ಮಲಾ ಸೀತಾರಾಮನ್ ರೊಂದಿಗೆ ಸಿಎಂ ಬೊಮ್ಮಾಯಿ

ಬೆಂಗಳೂರು: ಜಿಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸಬೇಕು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಕೇಂದ್ರ ಸರ್ಕಾರದಿಂದ ಜಿಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು ಎನ್ನಲಾಗಿದೆ.

ಕೋವಿಡ್ ಸಾಂಕ್ರಾಮಿಕದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸಾಮಾನ್ಯ ಸ್ಥಿತಿಗೆ ಬರಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿಎಸ್ ಟಿ ಪರಿಹಾರ ಸಾಲ ಒದಗಿಸಲಾಗಿತ್ತು. ಈ ವರ್ಷವೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಆದರೆ ರಾಜ್ಯಗಳ ಹಣಕಾಸು ಸ್ಥಿತಿ ಸುಧಾರಿಸುವವರೆಗೆ ಕೇಂದ್ರ ಸರ್ಕಾರದ ನೆರವು ಅತಿ ಅಗತ್ಯವಾಗಿದ್ದು ಮೂರು ವರ್ಷಗಳ ಅವಧಿಗೆ ಜಿಎಸ್ ಟಿ ಪರಿಹಾರ ವಿಸ್ತರಿಸುವಂತೆ ಮನವಿ ಸಿಎಂ ಮಾಡಿದರು.

ಅಂತೆಯೇ 15ನೆೇ ಹಣಕಾಸು ಆಯೋಗವು 2021 ರಿಂದ 2026 ರ ಅವಧಿಗೆ ರಾಜ್ಯಗಳಿಗೆ ತೆರಿಗೆ ಹಂಚಿಕೆಗೆ ಮಾಡಿದ ಶಿಫಾರಸಿನ ಅನ್ವಯ ರಾಜ್ಯದ ಹಂಚಿಕೆ 14 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ ಶೇ. 4.71 ರಿಂದ ಶೇ. 3.647 ಕ್ಕೆ ಇಳಿಕೆಯಾಗಿದೆ. ಇದರಿಂದ ಅನುದಾನ ಹಂಚಿಕೆಯಲ್ಲಿ ತೀವ್ರ ಇಳಿಕೆಯಾಗಿದೆ. ಅನುದಾನ ಹಂಚಿಕೆ ಕುರಿತ ಮಾನದಂಡಗಳನ್ನು ಬದಲಿಸುವಂತೆ ರಾಜ್ಯ ಸರ್ಕಾರವು 15ನೇ ಹಣಕಾಸು ಆಯೋಗಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದು ರಾಜ್ಯದ ಮನವಿಯನ್ನು ಆಯೋಗವು ಪರಿಗಣಿಸಿಲ್ಲ. ಇದರಿಂದಾಗಿ ದಕ್ಷಿಣದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿವರಿಸಿದರು.

15ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ರಾಜ್ಯ ನಿರ್ದಿಷ್ಟ ಅನುದಾನದಡಿ ರಾಜ್ಯಕ್ಕೆ ಬೆಂಗಳೂರಿನ ಜಲಮೂಲಗಳು ಹಾಗೂ ಫೆರಿಫೆರಲ್ ರಿಂಗ್ ರಸ್ತೆಗೆ 6000 ಕೋಟಿ ರೂ. ನಿಗದಿಪಡಿಸಿದೆ. ಆದರೆ ದೇಶದ ಐಟಿ ಮತ್ತು ಸ್ಚಾರ್ಟಪ್ ಗಳ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ದೇಶದ ಆರ್ಥಿಕತೆಯಲ್ಲಿ ಮತ್ತು ಆದಾಯದಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದೆ.  ಬೆಂಗಳೂರಿನಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದರಿಂದ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು ಸಹಾಯವಾಗುತ್ತದೆ. ನಗರದ ಅಭಿವೃದ್ಧಿಗೆ ಕೇಂದ್ರವು ಹಣವನ್ನು ಒದಗಿಸುವಂತೆ ಸಿಎಂ ಒತ್ತಾಯಿಸಿದ್ದಾರೆ. 

ಭಾರತ ಸರ್ಕಾರದ ಎಕ್ಸಪ್ಲೆನೇಟರಿ ಮೆಮೊರಂಡಂ ನಲ್ಲಿ ಹಣಕಾಸು ಆಯೋಗ ಈ ಮೇಲ್ಕಂಡ ಶಿಫಾರಸನ್ನು ಪ್ರಸ್ತಾಪಿಸಿಲ್ಲ. ಇದರಿಂದ ಮೊದಲೇ ತೆರಿಗೆ ಹಂಚಿಕೆಯಲ್ಲಿ ಇಳಿಕೆಯಾಗಿರುವ ರಾಜ್ಯಕ್ಕೆ ಇನ್ನಷ್ಟು ಹಿನ್ನಡೆಯಾಗಲಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಸ್ಟಾರ್ಟ್ ಅಪ್ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರು ದೇಶದ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದೆ. ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಯಿಂದ ಹೆಚ್ಚಿನ ಹೂಡಿಕೆ ಆಕರ್ಷಿಸಲು ಸಾಧ್ಯವಾಗುವುದು. ಆದ್ದರಿಂದ 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬೆಂಗಳೂರು ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com