ನೀಟ್ ಸೀಟು ಹಂಚಿಕೆ: ಸುಪ್ರೀಂಗೆ ಕೂಡಲೇ ಅರ್ಜಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಎಚ್ ಡಿಕೆ ಒತ್ತಾಯ

ನೀಟ್ ಸೀಟು ಹಂಚಿಕೆ ಪ್ರಕ್ರಿಯೆ ನೆಗೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ
Updated on

ಬೆಂಗಳೂರು: ನೀಟ್ ಸೀಟು ಹಂಚಿಕೆ ಪ್ರಕ್ರಿಯೆ ನೆಗೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ʼನೀಟಾಗಿʼ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ. ಕೇಂದ್ರ ಸರಕಾರಕ್ಕೆ ʼನೀಟ್‌ʼ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ ಎಂದಿದ್ದಾರೆ.

ಸಮಾನ ಶಿಕ್ಷಣ, ಸಮಾನ ಅವಕಾಶಗಳ ಸಂವಿಧಾನದ ಆಶಯವನ್ನು ಕೇಂದ್ರ ಸರ್ಕಾರ ಗಾಳಿಗೆ ಬಿಟ್ಟಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್ ಕೌನ್ಸಿಲಿಂಗ್ ಕೂಡಾ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಇದು ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಎಂದು ಟೀಕಿಸಿದ್ದಾರೆ.

ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ? ಇದೇ ಸತ್ಯ ಎನ್ನುವಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ವಿಳಂಬ ದ್ರೋಹದ ಹಿಂದೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರ್ಕಾರಗಳು ಅಸಹಾಯಕತೆಯ ನಾಟಕವಾಡುತ್ತಾ ವಿದ್ಯಾರ್ಥಿ- ಪೋಷಕರನ್ನು ಯಾಮಾರಿಸುತ್ತಿವೆ. ನೀಟ್ ವಿಳಂಬದಿಂದ ವೈದ್ಯ, ಇಂಜಿನಿಯರಿಂಗ್ ಸೀಟುಗಳು ಕಾಳಸಂತೆ ಬೀಕರಿಗೆ ಸರ್ಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ ಎಂದಿದ್ದಾರೆ. 

ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ವಿಶ್ವಗುರು ಮಾಡುವ ಉಮೇದಿನಲ್ಲಿರುವ ಕೇಂದ್ರ ಸರ್ಕಾರ, ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಅವರು ಆಗ್ರಹಿಸಿದ್ದಾರೆ. 

ನೀಟ್ ಅವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರ ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ ಖಾಸಗಿ ವೈದ್ಯ ಕಾಲೇಜುಗಳ ಜೊತೆ ಸರ್ಕಾರ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ. ಉನ್ನತ ಶಿಕ್ಷಣ ಎಲ್ಲರ ಹಕ್ಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com