ಬೆಂಗಳೂರು: ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಕೊಲೆ!
ಬೆಂಗಳೂರು: ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ತಂಡ ವೊಂದು ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆನೇಕಲ್ ತಾಲೂಕಿನ ಜಿಗಣಿ ಬಳಿ ಸೋಮವಾರ ರಾತ್ರಿ ನಡೆದಿದೆ.
ಅರ್ಚನಾ ರೆಡ್ಡಿ (38) ಹತ್ಯೆಯಾದ ಮಹಿಳೆಯಾಗಿದ್ದಾರೆ. ಅನೈತಿಕ ಸಂಬಂಧ ಮತ್ತು ಹಣಕಾಸು ವಿಚಾರ ಸಂಬಂಧ ಕೊಲೆ ನಡೆದಿರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
ಹತ್ಯೆಯಾಗಿರುವ ಅರ್ಚನಾ ಅವರು 8 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದರು. ಜಿಗಣಿಯಲ್ಲಿ ನೆಲೆಯೂರಿದ್ದ ಅರ್ಚನಾ ವ್ಯಕ್ತಿಯೊಬ್ಬನ ಜೊತೆದೆ ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತಿದೆ.
ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದೆ. ಸಂಬಂಧಿಕರೊಬ್ಬ ಮನೆಗೆ ಭೇಟಿ ನೀಡಿದ್ದ ಅರ್ಚನಾ ಅವರು ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರು ಹಾಗೂ ಸ್ಕೂಟರ್ ನಲ್ಲಿ ಬಂದಿರುವ ದುಷ್ಕರ್ಮಿಗಳು ಮಹಿಳೆಯನ್ನು ಹಿಂಬಾಲಿಸಿ ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಬಳಿಕ ಚಾಲಕ ಪ್ರಮೋದ್ ಅವರು ಅರ್ಚನಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ವೈದ್ಯರು ಆಕೆ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಈ ನಡುವೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕೊಲೆಗೆ ಸಂಚು ರೂಪಿಸಿದ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದು, ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ