ಸಿಇಒಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ  ಹಾಗೂ ಸಿಇಓಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿನ ಸಭೆಯ ಚಿತ್ರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿನ ಸಭೆಯ ಚಿತ್ರ
Updated on

ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ  ಹಾಗೂ ಸಿಇಒಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನೋಪಯೋಗಿ ಸರ್ಕಾರ ಆಗಬೇಕಾದರೆ ಜಿಲ್ಲಾ ಪಂಚಾಯಿತಿಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವುದು ಅತಿ ಮುಖ್ಯವಾಗಿದೆ. ನಿಮ್ಮ ಜಿಲ್ಲೆಯಲ್ಲಿ ಅತ್ಯುತ್ತಮ ಕಾರ್ಯಶೈಲಿಯಿಂದ ನಿಮ್ಮದೇ ಛಾಪನ್ನು ಮೂಡಿಸಿ ಎಂದು ಸಲಹೆ ನೀಡಿದರು.

ತಳಹಂತದಲ್ಲಿ ಯೋಜನೆಗಳ ಅನುಷ್ಠಾನ ಅತಿ ಮುಖ್ಯವಾದದ್ದು, ವಿಕೇಂದ್ರಿಕರಣ ಮೂಲಕ ನಿಮಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ನಿಮ್ಮ ವಿವೇಚನಾಧಿಕಾರವನ್ನು ಜಾಗರೂಕತೆಯಿಂದ ಜನರ ಹಿತಕ್ಕಾಗಿ ಬಳಕೆ ಮಾಡಬೇಕು. ಬಡವರ ಅನುಕೂಲಕ್ಕಾಗಿ ಅಧಿಕಾರಿಗಳು ಕೈಗೊಳ್ಳುವ ತೀರ್ಮಾನಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಅಧಿಕಾರಿಗಳು ಸ್ಪಷ್ಟ ನಿರ್ಣಯ ತೆಗೆದುಕೊಳ್ಳಬೇಕು. ಅನಿಶ್ಚಿತತೆ ಪ್ಲೇಗ್ ಇದ್ದಂತೆ. ವಿಳಂಬ ಧೋರಣೆ ಅತ್ಯಂತ ದುಬಾರಿ ಎಂದ ಮುಖ್ಯಮಂತ್ರಿ, ಅಧಿಕಾರಿಗಳ ವಿಳಂಬ ಧೋರಣೆ ಜನರನ್ನು ಸಂಕಷ್ಟಕ್ಕೀಡು ಮಾಡುತ್ತದೆ ಎಂದರು.

ಜನರ ಸುತ್ತ ಅಭಿವೃದ್ಧಿಯಾಗಬೇಕೇ ಹೊರತು ಅಭಿವೃದ್ಧಿ ಸುತ್ತ ಜನರು ಓಡಾಡಬಾರದು. ಜನರು ಹೆಚ್ಚಿನ ಸಂಖ್ಯೆಯಲ್ಲಿ ನಿಮ್ಮ ಹತ್ತಿರ ಬರುತ್ತಾರೆ ಎಂದರೆ ತಳಹಂತದಲ್ಲಿ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದರ್ಥ. ಆದ್ದರಿಂದ ವ್ಯವಸ್ಥೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ವ್ಯಕ್ತಿಗಳು ವ್ಯವಸ್ಥೆಯನ್ನು ಮುನ್ನಡೆಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ತಳಹಂತದ ಅಧಿಕಾರಿ, ಸಿಬ್ಬಂದಿ ಮೇಲೆ ಹತೋಟಿ ಹೊಂದಿರಬೇಕು. ಕಾಲ ಕಾಲಕ್ಕೆ ಪ್ರಗತಿ ಪರಿಶೀಲನೆ ನಡೆಸಬೇಕು. ಹಳ್ಳಿಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ನೀಡಿದರು. ಅಂತೆಯೇ ಸರ್ಕಾರಕ್ಕೆ ಕಾರ್ಯಕ್ರಮ ಅನುಷ್ಠಾನದಲ್ಲಿರುವ ಕಾನೂನು ಸಮಸ್ಯೆಗಳು, ಎದುರಾಗುವ ತೊಡಕುಗಳ ಬಗ್ಗೆ ವರದಿ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ನಿರ್ದೇಶನ ನೀಡಿದರು. 

ಜಲ ಜೀವನ್ ಮಿಷನ್, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತಿತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ ಕುರಿತು ತೀವ್ರ ನಿಗಾ ವಹಿಸಬೇಕು. ಇವುಗಳ ಕುರಿತ ಪ್ರಗತಿ ಮಾಹಿತಿಯನ್ನು ಪ್ರತ್ಯೇಕವಾಗಿ ನಿರ್ವಹಿಸಿ ಎಂದು ಸೂಚಿಸಿದರು. ಇಂದಿನ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಮುಕ್ತವಾಗಿ ನಿಮ್ಮ ಅಭಿಪ್ರಾಯ ತಿಳಿಸಿ, ಮುಂದಿನ ಆಯವ್ಯಯದಲ್ಲಿ ಸೂಕ್ತ ಅಂಶಗಳನ್ನು ಅಳವಡಿಸಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com