ಎಸ್ಎಸ್ಎಲ್'ಸಿ ಪರೀಕ್ಷೆಗೂ ಮುನ್ನ ಶಿಕ್ಷಕರಿಗೆ ಲಸಿಕೆ ನೀಡಲು ಕ್ರಮವಹಿಸಿ: ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

ಜುಲೈ ಮೂರನೇ ವಾರದಲ್ಲಿ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್'ಸಿ ಪರೀಕ್ಷಾ ಕಾರ್ಯದಲ್ಲಿ ತೊಗಡುವ ಎಲ್ಲಾ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಜುಲೈ ಮೂರನೇ ವಾರದಲ್ಲಿ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್'ಸಿ ಪರೀಕ್ಷಾ ಕಾರ್ಯದಲ್ಲಿ ತೊಗಡುವ ಎಲ್ಲಾ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 

ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದ್ದಾರೆ.

ಈ ಬಾರಿಯ ಎಸ್ಎಸ್ಎಲ್'ಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ 6000ಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಮಾಡಿ ಎಂದು ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಇದೇ ವೇಳೆ ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ  ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಬಿಬಿಎಂಪಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. 

ಶಿಕ್ಷಕರು  ಕೋವಿಡ್ ಲಸಿಕೆ ಪಡೆಯುವುದು ಮತ್ತು  ಪರೀಕ್ಷಾ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಿರುವುದು ಮತ್ತು ಈಗಾಗಲೇ ಶೈಕ್ಷಣಿಕ ಚುಟುವಟಿಕೆಗಳು ಪ್ರಾರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಹ ನಡೆಯುತ್ತಿರುವುದರಿಂದ ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರಬೇಕಿರುವುದರಿಂದ ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com