ರಾಜ್ಯ

ಡೆಲ್ಟಾ ಆತಂಕ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ 2 ಡೋಸ್ ಕೋವಿಡ್ ಲಸಿಕೆ ಕಡ್ಡಾಯ!

ಡೆಲ್ಟಾ ಆತಂಕ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ 2 ಡೋಸ್ ಕೋವಿಡ್ ಲಸಿಕೆ ಕಡ್ಡಾಯ!
ಅಂತರ್ ರಾಜ್ಯ ಪ್ರವಾಸಿಗರನ್ನು ವಿಜಯಪುರದಲ್ಲಿ ತಪಾಸಣೆ ನಡೆಸುತ್ತಿರುವುದು.
Published On :

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತಿದ್ದರೂ, ಮತ್ತೊಂದು ಕಡೆ ರೂಪಾಂತರಿ ಸೋಂಕಿನ ಕಾಟ ಶುರುವಾಗಿದೆ. ಹೀಗಾಗಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಬರುವವರಿಗೆ ಆರ್​​ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಿದೆ. ಒಂದು ವೇಳೆ ಆರ್​​ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದಿದ್ದರೆ, 2 ಡೋಸ್ ಲಸಿಕೆ ಪಡೆದುಕೊಂಡ ಪ್ರಮಾಣಪತ್ರವನ್ನು ತರುವಂತೆ ಸೂಚಿಸಿದೆ. 

2 ಡೋಸ್ ಲಸಿಕೆ ಪಡೆದುಕೊಂಡಿದ್ದರೂ, ಕೋವಿಡ್ ಲಕ್ಷಣಗಳು ಕಂಡು ಬಂದಿದ್ದರೆ, ಅಂತಹವರಿಗೆ, ರ್ಯಾಂಡಮ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಈ ರ್ಯಾಂಡಮ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದೇ ಆದರೆ, ಸ್ಯಾಂಪಲ್'ನ್ನು ಆರ್'ಟಿಪಿಸಿಆರ್ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಈ ಸಂದರ್ಭದಲ್ಲಿ ವ್ಯಕ್ತಿ ರಾಜ್ಯ ಪ್ರವೇಶಿಸುವುದಕ್ಕೂ ಮುನ್ನ ಅವರ ವಾಸ ಸ್ಥಾನದ ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಇನ್ನಿತರೆ ಮಾಹಿತಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಆರ್​​ಟಿಪಿಸಿಆರ್ ವರದಿ ಬರುವವರೆಗೂ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆಯೂ ಸೂಚಿಸಲಾಗುತ್ತದೆ. ಒಂದು ವೇಳೆ ಪರೀಕ್ಷಾ ವರದಿ ಪಾಟಿಸಿವ್ ಬಂದಿದ್ದೇ ಆದರೆ, ನಿಯಮದಂತೆ ಅವರನ್ನು ಟ್ರಯಾಜಿಂಗ್ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. 

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗುವವರಿಗೂ ಇದೇ ರೀತಿಯ ನಿಯಮವನ್ನೇ ಅನುಸರಿಸಲಾಗುತ್ತದೆ. ಸರ್ಕಾರದ ಮುಂದಿನ ಆದೇಶದವರೆಗೂ ಇದೇ ನಿಯಮವನ್ನು ಅನುಸರಿಸಲಾಗುತ್ತದೆ. ಗಡಿಪ್ರದೇಶದ ಪ್ರವೇಶ ಭಾಗದಲ್ಲಿ ಮೊಬೈಲ್ ಕೋವಿಡ್ ಟೆಸ್ಟಿಂಗ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ನಡುವೆ ವಿಜಯಪುರ ಆಡಳಿತ ಮಂಡಳಿ ಅಧಿಕಾರಿಗಳು ಶಿರಾಡೋಣ, ಧೂಳಖೇಡ(ಝಳಕಿ)ಗಳಲ್ಲಿ ಚೆಕ್ ಪೋಸ್ಟ್'ಗಳನ್ನು ಸ್ಥಾಪಿಸಿದ್ದು, ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಇತರೆ ಸಿಬ್ಬಂದಿಗಳು ಹಾಗೂ ಪೊಲೀಸರು ತಪಾಸಣಾ ಕಾರ್ಯ ನಡೆಸುತ್ತಿದ್ದಾರೆ. 

ಮಹಾರಾಷ್ಟ್ರದಲ್ಲಿ ಸಂಭವನೀಯ ಮೂರನೇ ಅಲೆಯ ಲಕ್ಷಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಮುನ್ನೆಚ್ಚರಿಕೆಯೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.