ಟೌಕ್ಟೇ ಚಂಡಮಾರುತ: ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ: ಸಿಎಂ ಬಿಎಸ್ ಯಡಿಯೂರಪ್ಪ
ಬೆಂಗಳೂರು: ಟೌಕ್ಟೇ ಚಂಡಮಾರುತ ವಿಚಾರವಾಗಿ ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದ ಕರಾವಳಿ ಭಾಗದಲ್ಲಿ ಟೌಕ್ಟೇ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ತಕ್ಷಣವೇ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸಿಎಂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಟೌಕ್ಟೇ ಚಂಡಮಾರುತದ ಪರಿಣಾಮ ತೀವ್ರ ಸ್ವರೂಪದಲ್ಲಿ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಸಚಿವರನ್ನು ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಕೊರೋನ ನಿಯಂತ್ರಣ ಕಾರ್ಯಗಳ ಜೊತೆಗೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಯಾವುದೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರುಗಳಿಗೆ ಅಥವಾ ತಮಗೆ ನೇರವಾಗಿ ಕರೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ತಿಳಿಸಿದ್ದಾರೆ.
ಅಲ್ಲದೆ ತಾವು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮತ್ತು ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದ್ದೇನೆ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ