ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಉಚಿತ: ಸಚಿವ ಸುರೇಶ್ ಕುಮಾರ್

ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್
Updated on

ಬೆಂಗಳೂರು: ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೇಂದ್ರ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಸಚಿವರು, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಸರಳವಾಗಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕ ಎಂದು ಪ್ರತಿಪಾದಿಸಿದರು. 

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದರು. 

ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಹಲವರ ಪ್ರತಿಪಾದನೆಯಾಗಿದೆ. ಸರಳೀಕೃತ ಮಾದರಿಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶ ಅಗತ್ಯವಿದೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯೂ ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಸಲಹೆ ನೀಡಿದೆ ಎಂದರು.

ಕರ್ನಾಟಕ ರಾಜ್ಯವು ಕಳೆದ ಸಾಲಿನಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಹೊಂದಿದೆ. ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸಲು ಸರ್ಕಾರ ಸಿದ್ಧವಿದೆ. ಆದರೆ, ವಿದ್ಯಾರ್ಥಿಗಳ ಕಲಿಕೆ, ಪೋಷಕರ ಮನ:ಸ್ಥಿತಿ, ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಪ್ರಸ್ತುತ ಪೂರ್ವಸಿದ್ಧತಾ ಕಾರ್ಯಗಳನ್ನು ಸಮಗ್ರವಾಗಿ ಅವಲೋಕಿಸಿ, ಒಟ್ಟಾರೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ.  ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ಮಾಹೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹಾಗಾಗಿ ನೀಟ್, ಜೆಇಇ, ಸಿಇಟಿ, ಐಸಿಎಆರ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್  ತಿಂಗಳಲ್ಲಿ ನಡೆಸಬಹುದು ಎಂದು ಸುರೇಶ್ ಕುಮಾರ್ ಸಲಹೆ ನೀಡಿದರು.

ವಿವಿಧ ರಾಜ್ಯಗಳ ಶಿಕ್ಷಣ ಸಚಿವರು ತಮ್ಮ ರಾಜ್ಯಗಳ ಸ್ಥಿತಿಗತಿಗಳನ್ನು ಗಮನಕ್ಕೆ ತಂದರು. ಬಹುಪಾಲು ಸಚಿವರು ಪರೀಕ್ಷೆಗಳನ್ನು ನಡೆಸಲೇಬೇಕೆಂದು ಪ್ರತಿಪಾದಿಸಿದರು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com