ಮಡಿಕೇರಿ: ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕೋವಿಡ್-19 ಸೋಂಕು ಪೀಡಿತ ತಂದೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ.
ಕೊಡಗಿನ ಗೋಣಿಕೊಪ್ಪದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಸಾವಿಗೀಡಾಗಿದ್ದ ವಿಕತಚೇತನ ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ತಂದೆ ರಾಜನ್ (70ವರ್ಷ) ಕೂಡ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ 37 ವರ್ಷದ ವಿಕಲಚೇತನ ಸಜೇಶ್ ನನ್ನು ಗೋಣಿಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದ. ಭಾನುವಾರ ಅಂತ್ಯಕ್ರಿಯೆ ನಡೆದಿತ್ತು. ಆದರೆ ಈ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ತಂದೆ ರಾಜನ್ ಇದ್ದಕ್ಕಿದ್ದ ಹಾಗೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆ ಸಾಗಿಸಲು ಪ್ರಯತ್ನಿಸಲಾಯಿತಾದರೂ ಅವರು ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ತಂದು ಕೋವಿಡ್ ಪರೀಕ್ಷೆ ನಡೆಸಿದಾಗ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
ಅಂತೆಯೇ ರಾಜನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದೀಗ ರಾಜನ್ ಅವರ ಅಂತ್ಯಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿ ನಿರ್ಬಂಧಗಳೊಂದಿಗೆ ನೆರವೇರಿಸಲಾಗುತ್ತಿದೆ.
Advertisement