ಮೇಕೆದಾಟು ಬಿಕ್ಕಟ್ಟು: ಕಾನೂನು ತಜ್ಞರ ಸಲಹೆ ಪಡೆಯಲು ಸಿಎಂ ಯಡಿಯೂರಪ್ಪ ನಿರ್ಧಾರ
ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠವು ಮೇಕೆದಾಟು ಯೋಜನೆ ಸಂಬಂಧಪಟ್ಟಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.ಈ ಸಂಬಂಧ ಸಮಿತಿಯನ್ನು ಕೂಡ ರಚಿಸಿದೆ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲಿದೆ ಎಂಬುದರ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸಮಿತಿಗೆ ಪೀಠ ಸೂಚಿಸಿದೆ. ಪರಿಸರ ಪರಿಣಾಮ ಬಗ್ಗೆ ಯಾರೊಬ್ಬರೂ ಅಕ್ಷೇಪಣೆ ಸಲ್ಲಿಸದೆ ಹೋದರೂ ದಿನಪತ್ರಿಕೆಯೊಂದರ ವರದಿ ಆಧರಿಸಿ ಪೀಠವು ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಪಂಡಿತರ ಅಭಿಪ್ರಾಯ ಪಡೆದು ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಿಗದಿಯಾಗಿದ್ದು, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಅಂತರ್ ರಾಜ್ಯ ಜಲ ವಿವಾದದ ಕಾನೂನು ಪಂಡಿತರು ಹಾಗೂ ಹಿರಿಯ ವಕೀಲರು ಸಭೆಯಲ್ಲಿ ಮುಂದಿನ ಕಾನೂನು ಹೋರಾಟದ ರೂಪುರೇಷೆ ಸಿದ್ಧವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ನಾಯಕತ್ವ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಬೊಮ್ಮಾಯಿಯವರು, ಯಾವುದೇ ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಯಾರು ಈ ಬಗ್ಗೆ ಮಾತನಾಡುತ್ತಿದ್ದಾರೋ ಅವರನ್ನೇ ಪ್ರಶ್ನಿಸಿ ಎಂದಿದ್ದಾರೆ.