ಬೆಂಗಳೂರು: ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವ ರೋಗಿಗಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆಗೆ ಕೊರತೆಯಾಗದಂತೆ ಔಷಧಿ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಪಾಲಿಕೆಯ ಪೂರ್ವ ವಲಯ ಕೋವಿಡ್-19 ಮೇಲ್ವಿಚಾರಣೆ ಉಸ್ತುವಾರಿ ಹೊತ್ತಿರುವ ವಸತಿ ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.
ಬುಧವಾರ ಪಾಲಿಕೆಯ ಪೂರ್ವ ವಲಯದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಚರಕನಹಳ್ಳಿ ಸಮೀಪದ ಸೇಂಟ್ ಥಾಮಸ್ ಟೌನ್ ಇಂಡಿಯಾ ಕ್ಯಾಂಪಸ್ ಕ್ರೂಡ್ ನಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಸಜ್ಜುಗೊಳಿಸಲಾದ 60 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ರೋಗಿಗಳಿಗೆ ವೈದ್ಯಕೀಯ ನೆರವು ನೀಡಲು 60 ಹಾಸಿಗೆಯ ಆರೈಕೆ ಕೇಂದ್ರವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ನಿರ್ಮಿಸಲಾಗಿದೆ. ಟ್ರಯಾಜ್ ಸೌಕರ್ಯ, ಆಕ್ಸಿಜನ್ ವ್ಯವಸ್ಥೆ ಹಾಗೂ ಕೋವಿಡ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಪೌಷ್ಠಿಕ ಆಹಾರ ಸರಬರಾಜು ಸೌಲಭ್ಯಗಳನ್ನು ಈ ಕೇಂದ್ರ ಹೊಂದಿದೆ. ರೋಗಿಗಳ ಮೇಲ್ವಿಚಾರಣೆಗೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
Advertisement