ವಿವಾದಾತ್ಮಕ ಹೇಳಿಕೆ: ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ಆಕ್ಷೇಪಾರ್ಹವಾದ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅವರ ವಿರುದ್ಧದ ತನಿಖೆಗೆ...
ಹಂಸಲೇಖ
ಹಂಸಲೇಖ
Updated on

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಬಿಳಿಗಿರಿ ರಂಗನಾಥ ಸ್ವಾಮಿ ಬಗ್ಗೆ ಆಕ್ಷೇಪಾರ್ಹವಾದ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅವರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಅಲ್ಲದೇ, ಈ ಸಂಬಂಧ ಬಸವನಗುಡಿ ಠಾಣೆ ಪೊಲೀಸರು, ಡಾ.ಮುರಳೀಧರ ಮತ್ತು ಎಸ್ ಎನ್ ಅರವಿಂದ್ ಅವರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ಐಆರ್ ಮತ್ತು 37ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಗಂಗರಾಜು ಅಲಿಯಾಸ್ ಹಂಸಲೇಖ ಅವರು ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠ, ಸಂಗೀತ ನಿರ್ದೇಶಕರ ವಿರುದ್ಧದ ತನಿಖೆಗೆ ತಡೆ ನೀಡಿದೆ. ಇದು ಹಂಸಲೇಖ ಅವರಿಗೆ ಹೈಕೋರ್ಟ್ ಬಿಗ್‌ ರಿಲೀಫ್ ನೀಡಿದೆ. 

ಅರ್ಜಿದಾರ ಪರ ವಕೀಲ ಸಿ ಎಸ್ ದ್ವಾರಕನಾಥ್ ಅವರು “ಹಂಸಲೇಖ ವಿರುದ್ಧ ಒಂದೇ ಘಟನೆಗೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನುಬಾಹಿರ ಕ್ರಮ” ಎಂದರು.

ದೂರುದಾರರಿಗೂ ಮತ್ತು ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಇನ್ನೂ ದೂರು ಸಹ ಅಸ್ಪಷ್ಟತೆಯಿಂದ ಕೂಡಿದೆ. ದೂರಿನಲ್ಲಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ಎಫ್ಐಆರ್ ರದ್ದುಗೊಳಿಸಬೇಕು ಮತ್ತು ಪ್ರಕರಣಕ್ಕೆ ತಡೆ ನೀಡಬೇಕು ಎಂದು ಹಂಸಲೇಖ ಅವರ ಪರ ವಕೀಲರು ಮನವಿ ಮಾಡಿದರು.

ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಂಸಲೇಖ ಅವರು ಅಸ್ಪೃಷ್ಯತೆ ಕುರಿತು ಮಾತನಾಡಿದ್ದರು. ಈ ಬಗ್ಗೆ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಖುದ್ದು ಕ್ಷಮೆ ಕೋರಿದ್ದರು. ನಂತರವೂ ಕೆಲ ವ್ಯಕ್ತಿಗಳು ಹಂಸಲೇಖ ಅವರ ಹೇಳಿಕೆಯಿಂದ ಧಾರ್ಮಿಕ ನಂಬಿಕೆಗಳಿಗೆ ಹಾಗೂ ಪೇಜಾವರ ಶ್ರೀಗಳಿಗೆ ಅಪಮಾನವಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ, ಪೊಲೀಸರು ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com