ಸಾರಿಗೆ ಇಲಾಖೆ ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ
ಸಾರಿಗೆ ಇಲಾಖೆ ನೌಕರರ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
Published: 08th April 2021 09:53 AM | Last Updated: 08th April 2021 10:02 AM | A+A A-

ಬಿ ಎಸ್ ಯಡಿಯೂರಪ್ಪ
ಬೆಳಗಾವಿ: ಸಾರಿಗೆ ಇಲಾಖೆ ನೌಕರರ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಹೀಗಿರುವಾಗ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಇವತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ. ಅಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಂಡು ಮುಂದೆ ತೆಗೆದುಕೊಳ್ಳಬೇಕಾದ ಕಠಿಣ ಕ್ರಮದ ಬಗ್ಗೆ ಪರಾಮರ್ಶೆ ನಡೆಸುತ್ತೇನೆ ಎಂದರು.
ಕಾಂಗ್ರೆಸ್ ನಾಯಕರು ಬಸ್ ನೌಕರರ ಮುಷ್ಕರಕ್ಕೆ ಬೆಂಬಲ ನೀಡಿರುವ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದಾಗ, ಈ ವಿಚಾರವನ್ನು ರಾಜಕೀಯಕ್ಕಾಗಿ ಬಳಸಿಕೊಂಡರೆ ಏನು ಹೇಳಲಿ, ಸಿಬ್ಬಂದಿ ಕೆಲಸಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದಷ್ಟೇ ಹೇಳುತ್ತೇನೆ ಎಂದರು.
ಬಸ್ ನೌಕರರ ಮುಷ್ಕರ ಕುರಿತು ಇಂದು ಸಾಯಂಕಾಲದೊಳಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.