ಕೇರಳದಲ್ಲಿ ಕೊರೋನಾ ಹೆಚ್ಚಳ: ಮಂಗಳೂರು-ಕಾಸರಗೋಡು ಮಧ್ಯೆ ಬಸ್ ಸಂಚಾರ ಸ್ಥಗಿತ, ನೆಗೆಟಿವ್ ಟೆಸ್ಟ್ ವರದಿ ಕಡ್ಡಾಯ

ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕಾರಣ ಮಂಗಳೂರು-ಕಾಸರಗೋಡು (Mangaluru-Kasaragod) ಮಧ್ಯೆ ಭಾನುವಾರದಿಂದ ಒಂದು ವಾರ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕಾರಣ ಮಂಗಳೂರು-ಕಾಸರಗೋಡು (Mangaluru-Kasaragod) ಮಧ್ಯೆ ಭಾನುವಾರದಿಂದ ಒಂದು ವಾರ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಕೋವಿಡ್-19 (Covid 19) ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ಇಂದಿನಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಆಗಲಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸೇರಿ ಯಾವುದೇ ಬಸ್ ಸಂಚಾರ ಲಭ್ಯವಿರುವುದಿಲ್ಲ.

ಸಭೆ-ಸಮಾರಂಭ, ಕಾರ್ಯಕ್ರಮ ರದ್ದು: ಕೊರೋನಾ ಮೂರನೇ ಅಲೆ ನಿಯಂತ್ರಣ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ-ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಲಾಗುವುದು. ಮದುವೆ ಕಾರ್ಯಕ್ರಮಗಳಿಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ನಿಯಮ ಉಲ್ಲಂಘಿಸಿದರೆ ಮಾಲೀಕರ ಮೇಲೆ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. 

ನೆಗೆಟಿವ್ ವರದಿ ಕಡ್ಡಾಯ: ಕೇರಳದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ವಿದ್ಯಾರ್ಥಿ ನಿಲಯಗಳಲ್ಲಿಯೇ 1 ವಾರ ಕ್ವಾರಂಟೈನ್‍ ಮಾಡಬೇಕಿದೆ. ಕುಟುಂಬದಲ್ಲಿ ಇಬ್ಬರಿಗಿಂತ ಹೆಚ್ಚಿನವರಿಗೆ ಸೋಂಕು ಕಂಡುಬಂದರೆ ಅಂತಹ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಘೋಷಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಾಹನಗಳ ತಪಾಸಣೆ: ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಲ್ಲಿಂದ ರಾಜ್ಯಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಪ್ರಯಾಣಿಕರ ನೆಗೆಟಿವ್ ಆರ್ ಟಿ ಪಿಸಿಆರ್ ವರದಿಯನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಲಾಗುತ್ತಿದೆ. ಇಲ್ಲದಿದ್ದರೆ ಅಂತವನ್ನು ಹಿಂದೆ ವಾಪಸ್ ಕಳುಹಿಸಲಾಗುತ್ತಿದೆ. 

ಕೆಲವು ಚೆಕ್ ಪೋಸ್ಟ್ ಗಳಲ್ಲಿ ನಿರ್ಲಕ್ಷ್ಯ: ಇನ್ನು ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಿಸಲು ಮಹಾರಾಷ್ಟ್ರ, ಕೇರಳ, ತಮಿಳು ನಾಡು ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ, ಸೂಕ್ತ ತಪಾಸಣೆ ಮಾಡಿಯೇ ವಾಹನಗಳನ್ನು, ಜನರನ್ನು ಗಡಿಯೊಳಗೆ ಬಿಡುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ ನೀಡಿದ್ದರು.

ಆದರೆ ಕೆಲವು ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡುಬರುತ್ತಿದೆ. ಚಾಮರಾಜನಗರ ಜಿಲ್ಲೆಯ ಗಡಿಯ ಚೆಕ್ ಪೋಸ್ಟ್ ನೆಪ ಮಾತ್ರಕ್ಕೆ ಇದ್ದು ಇಲ್ಲಿ ಸರಿಯಾಗಿ ತಪಾಸಣೆ ಮಾಡುತ್ತಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com