ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆಯಿಂದ ಧ್ವಜಾರೋಹಣ ಬೇಡ: ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. 
ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ

ವಿಜಯಪುರ: ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. 

ಜಿಲ್ಲಾಡಳಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಘಟನೆ ನಡೆದಿದೆ.

ಧ್ವಜಾರೋಹಣಕ್ಕೆ ಸಚಿವೆ ಜೊಲ್ಲೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯರು ಘೇರಾವ್ ಹಾಕಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ವಿಜಯಪುರ ಜಿಲ್ಲೆಗೆ ಬೇಡವೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಕ್ಕಳಿಗೆ ನೀಡುವ ಮೊಟ್ಟೆಯ ವಿಚಾರದಲ್ಲಿ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು. ಇಂತಹ ಭ್ರಷ್ಟರಿಗೆ ಧ್ವಜಾರೋಹಣ ಮಾಡುವ ಯೋಗ್ಯತೆ ಇಲ್ಲ. ಇದು ಅವಮಾನಕರ ಎಂದು ಘೋಷಣೆಗಳನ್ನು ಕೂಗಿದರು. ಜೊಲ್ಲೆ ಅವರು ಧ್ವಜಾರೋಹಣ ನಡೆಸುವುದಕ್ಕೆ ಅಡ್ಡಿಪಡಿಸಲು ಮುಂದಾದರು.

ಈ ವೇಳೆ ಕೂಡೇ ಕಾರ್ಯಪ್ರವೃತ್ತರಾದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ‌ ಪಡೆದು, ಬಂಧಿಸಿ ಠಾಣೆಗೆ ಕರೆದೊಯ್ದರು.

ಮೊಟ್ಟೆ ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿರುವ ಸಚಿವೆ ಶಶಿಕಲಾ‌ ಜೊಲ್ಲೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡುವುದನ್ನು ವಿರೋಧಿಸಿ‌ ಪ್ರತಿಭಟನೆಗೆ ಮುಂದಾದ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ‌ ಪದಾಧಿಕಾರಿಗಳನ್ನು ಪೊಲೀಸರು‌ ಬಂಧಿಸಿದ‌ ಘಟನೆ ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲದಲ್ಲಿ ಭಾನುವಾರ ಬೆಳಗ್ಗೆ‌ ನಡೆಯಿತು.

ಬಳಿಕ ಇತ್ತ ಬಿಗಿ‌ ಪೊಲೀಸ್ ಬಂದೋಬಸ್ತ್ ನಲ್ಲಿ ಶಶಿಕಲಾ‌ ಜೊಲ್ಲೆ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com