ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲಿ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ಮತ್ತೆ ವರುಣನ ಭೀತಿ ಎದುರಾಗಿದೆ.
Published: 15th August 2021 06:11 PM | Last Updated: 15th August 2021 06:11 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಲ್ಲಿ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ಮತ್ತೆ ವರುಣನ ಭೀತಿ ಎದುರಾಗಿದೆ.
ಇಂದೂ ಸಹ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.