ನೆಲ, ಜಲ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಸಿಎಂ ಬೊಮ್ಮಾಯಿ

‘ರಾಜ್ಯದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಯಾರೊಂದಿಗೂ ನಾನು ರಾಜಿ ಆಗುವುದಿಲ್ಲ. ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ‘ರಾಜ್ಯದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಯಾರೊಂದಿಗೂ ನಾನು ರಾಜಿ ಆಗುವುದಿಲ್ಲ. ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನದ ಮೂಲಕ ರಾಜ್ಯಕ್ಕೆ ಹಂಚಿಕೆಯಾಗಿರುವ ನದಿಗಳ ನೀರನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳುವ ಸಂಕಲ್ಪ ನಮ್ಮದು. ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಕಾವೇರಿ ಜಲವಿವಾದ ನ್ಯಾಯಾಧೀಕರಣ, ಸುಪ್ರೀಂಕೋರ್ಟ್ ಆದೇಶಗಳನ್ವಯ ರಾಜ್ಯಕ್ಕೆ ಹಂಚಿಕೆಯಾಗಿರುವ ಹೆಚ್ಚುವರಿ ನೀರಿನ ಸದ್ಭಳಕ್ಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು. 

ನೆರೆಯ ತಮಿಳುನಾಡು ರಾಜ್ಯ ಎಷ್ಟೇ ಅಡ್ಡಿಪಡಿಸಿದರೂ ಮೇಕೆದಾಟು ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಈ ಯೋಜನೆಯ ಅನುಷ್ಠಾನದಿಂದ ರಾಜ್ಯ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಗ್ರಾಮೀಣ ಪ್ರದೇಶದಲ್ಲಿ 91 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ನೀಡುವೋ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಜಲ ಜೀವನ್ ಮಿಷನ್ ಯೋಜನೆಯನ್ನು ಮನೆ ಮನೆಗೆ ಗಂಗೆ ಎಂಬ ಕಾರ್ಯಕ್ರಮದಡಿ ಜಾರಿಗೊಳಿಸಲಾಗುತ್ತಿದೆ. ಈ ವರ್ಷ 25 ಲಕ್ಷ ನಳ ಸಂಪರ್ಕ ಒದಗಿಸಲಾಗುವುದು ಎಂದರು. 

ಮೇಕೆದಾಟು ಯೋಜನೆಯು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ವಿವಾದಾತ್ಮಕ ವಿಚಾರವಾಗಿ ಅಷ್ಟೇ ಅಲ್ಲದೆ, ಉಭಯ ರಾಜ್ಯಗಳ ಬಿಜೆಪಿ ನಾಯಕರ ನಡುವೆಯೂ ಮಾತಿನ ಚಕಮಕಿಗೆ ಕಾರಣವಾಗಿದೆ. 

ಕೆಲ ದಿನಗಳ ಹಿಂದಷ್ಟೇ ಈ ಯೋಜನೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ನೀಡಿದ್ದ ಹೇಳಿಕೆ ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿತ್ತು. 

ಅಂತರ್ ರಾಜ್ಯ ವಿಚಾರವನ್ನು ರಾಜಕೀಯ ಮಾಡುವುದು ಸರಿಯಲ್ಲ. ತಮ್ಮ ತಮ್ಮ ಪಾಲಿನ ನೀರನ್ನು ಬಳಕೆ ಮಾಡಲು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಯಾವುದೇ ನಿರ್ಬಂಧಗಳಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ನಾನು ಭಾರತದ ಪರ. ನ್ಯಾಯಾಲಯಗಳು ಈ ಬಗ್ಗೆ ಹಲವು ತೀರ್ಪುಗಳನ್ನು ನೀಡಿವೆ. ನ್ಯಾಯ ಯಾರ ಪರವಾಗಿದೆಯೋ ಹಾಗೆ ನಾನು. ತೀರ್ಪಿನ ವ್ಯಾಪ್ತಿಯೊಳಗೆ ಕರ್ನಾಟಕ ಮತ್ತು ತಮಿಳುನಾಡು ನೀರು ಹಂಚಿಕೆ ಮಾಡಿಕೊಂಡರೆ ಅಡ್ಡಿ ಇಲ್ಲ. ತೀರ್ಪನ್ನು ಮೀರಿದರೆ ಮಾತ್ರ ವಿರೋಧ ವ್ಯಕ್ತವಾಗಲಿದೆ. ಇದೇ ಮಾತನ್ನು ತಮಿಳುನಾಡಿನ ನೆಲದಲ್ಲಿಯೂ ಹೇಳಿದ್ದೇನೆ. ಇಲ್ಲಿಯೂ ಹೇಳುತ್ತಿದ್ದೇನೆಂದು ಹೇಳಿದ್ದರು. 

ಯೋಜನೆ ಕುರಿತು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು, ಕರ್ನಾಟಕ ಸಲ್ಲಿಸಿದ್ದ ಮೇಕೆದಾಟು ಸಮಗ್ರ ಯೋಜನಾ ವರದಿಗೆ ಷರತ್ತು ಬದ್ಧ ಅನುಮತಿ ನೀಡಿದ್ದೇವೆ. ಆದರೆ, ಇದು ಅಂತಾರಾಜ್ಯ ಯೋಜನೆ ಆಗಿರುವ ಕಾರಣ ಕಾವೇರಿ ಕಣಿವೆ ರಾಜ್ಯಗಳಾದ ತಮಿಳುನಾಡು, ಕೇರಳ, ಪುದುಚೇರಿ ಅನುಮತಿ ಬೇಕು. ರಾಜ್ಯವು ಯೋಜನಾ ವರದಿ (ಡಿಪಿಆರ್‌) ಕೊಟ್ಟಾಗಲೇ ಇದನ್ನು ಸ್ಪಷ್ಟವಾಗಿ ತಿಳಿಸಿದ್ದೆವು. ಯೋಜನೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಕೂಡ ಕಡ್ಡಾಯ. ಜತೆಗೆ ಈ ಯೋಜನೆಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಸಮ್ಮತಿ ಇನ್ನೂ ಸಿಕ್ಕಿಲ್ಲ ಎಂದು ಹೇಳಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com