ಜಲಜೀವನ ಬಹುಗ್ರಾಮ ಯೋಜನೆ ಮೇಲ್ವಿಚಾರಣೆಗೆ ಸಮಿತಿ ರಚನೆ

ರಾಜ್ಯದ ಜಲ ಜೀವನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಯೋಜನೆಯ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಬೊಮ್ಮಾಯಿ
ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಜಲ ಜೀವನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಯೋಜನೆಯ ಮೇಲ್ವಿಚಾರಣೆಗೆ ಸಮಿತಿ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. 

ಈ ವೇಳೆ ಮಾತನಾಡಿದ ಅವರು, ಜಲಜೀವನ್ ಮಿಷನ್ ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು,  ಇದನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಹೇಳಿದರು. 

ಪ್ರತಿ 15 ದಿನಕ್ಕೊಮ್ಮೆ ಬಹುಗ್ರಾಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಕಾಲ ಕಾಲಕ್ಕೆ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಪ್ರತಿ ತಿಂಗಳು ತಾವು ಖುದ್ದು ಪ್ರಗತಿ ಪರಿಶೀಲನೆ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮೇಲ್ಮೈ ಜಲ ಮೂಲ ಇಲ್ಲದ ಜಿಲ್ಲೆಗಳಿಗೆ ನೀರು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. 

2022-23ರ ಸಾಲಿಗೆ ಯೋಜನೆ ರೂಪಿಸಿ, ಅನುಮೋದನೆ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಸಕ್ತ ಸಾಲಿನ ಎಲ್ಲ ಡಿಪಿಆರ್ ಗಳ ಅನುಮೋದನಾ ಪ್ರಕ್ರಿಯೆ ಅಕ್ಟೋಬರ್ ಒಳಗೆ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಅನುಮೋದನೆ ಯಲ್ಲಿನ ತೊಡಕುಗಳ ನಿವಾರಣೆಗೆ ತಾವೇ ಖುದ್ದು ಕ್ರಮ ವಹಿಸುವ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು. 

ಬಿಎಸ್'ವೈಗೆ ಬೊಮ್ಮಾಯಿ ದೂರವಾಣಿ ಕರೆ
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ್ದು, ಉಭಯ ನಾಯಕರು ಕೆಲಕಾಲ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 

ಯಡಿಯೂರಪ್ಪ ಅವರು ಕುಟುಂಬ ಸದಸ್ಯರೊಂದಿಗೆ 5 ದಿನಗಳ ಕಾಲ ಮಾಲ್ವೀವ್ಸ್ ಪ್ರವಾಸ ಕೈಗೊಂಡಿದ್ದು, ಸೋಮವಾರ ನಗರಕ್ಕೆ ವಾಪಸ್ಸಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com