ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ; ವಿಧಿ ವಿಜ್ಞಾನ ಪ್ರಯೋಗಾಲಯ ಉನ್ನತೀಕರಿಸಲು ಆದ್ಯತೆ: ಆರಗ ಜ್ಞಾನೇಂದ್ರ

ಸರ್ಕಾರವು ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು (ಎಫ್‌ಎಸ್‌ಎಲ್) ಮತ್ತಷ್ಟು ಸಮರ್ಥಗೊಳಿಸಲು ಮತ್ತು ಮೇಲ್ದರ್ಜೆಗೇರಿಸಲು ಯೋಜಿಸುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ

ಬೆಂಗಳೂರು: ಸರ್ಕಾರವು ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು (ಎಫ್‌ಎಸ್‌ಎಲ್) ಮತ್ತಷ್ಟು ಸಮರ್ಥಗೊಳಿಸಲು ಮತ್ತು ಮೇಲ್ದರ್ಜೆಗೇರಿಸಲು ಯೋಜಿಸುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ರಾಜ್ಯ ಪೋಲಿಸ್ ಕರ್ನಾಟಕ ಮೀಸಲು ಪೊಲೀಸ್ ವಿಭಾಗ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲಾ ಎಫ್‌ಎಸ್‌ಎಲ್‌ಗಳನ್ನು ಉನ್ನತೀಕರಿಸುವ ಪ್ರಸ್ತಾಪವಿದೆ ಎಂದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಕರ್ನಾಟಕ ಪೋಲಿಸರು ಶ್ಲಾಘನೀಯ ಕೆಲಸ ಮಾಡುತ್ತಿರುವುದನ್ನು ಶ್ಲಾಘಿಸಿದ ಜ್ಞಾನೇಂದ್ರ, ಅವರಿಗೆ ಸಂಬಂಧಿಸಿದ ಕಲ್ಯಾಣ ಕಾರ್ಯಕ್ರಮಗಳನ್ನು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಯುವಕರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುವುದನ್ನು ತಪ್ಪಿಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು. ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉನ್ನತೀಕರಿಸಲು ಹೆಚ್ಚು ಆದ್ಯತೆ ನೀಡಲಾಗುವುದು.  ಆಡುಗೋಡಿಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ನೂರು ಎಕರೆ ಜಾಗವಿದೆ. ಅಲ್ಲಿ ಮತ್ತೊಂದು ಪೊಲೀಸ್ ಪಬ್ಲಿಕ್ ಶಾಲೆ ಆರಂಭ ಮಾಡುವ ಉದ್ದೇಶವಿದೆ. ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪೊಲೀಸ್ ಮಕ್ಕಳ ಶಾಲೆ, ಶಿಶು ವಿಹಾರವನ್ನು ನೋಡಿ ತುಂಬ ಸಂತೋಷವಾಗಿದೆ. ಶಿಕ್ಷಣ ವಾಣಿಜ್ಯೀಕರಣವಾಗಿದ್ದು, ಹೆಚ್ಚು ಹಣ ಉಳ್ಳವರಿಗೆ ಮಾತ್ರ ಒಳ್ಳೆಯ ವಿದ್ಯಾಭ್ಯಾಸ ಸಿಗುವಂತಾಗಿದೆ. ಸಾಮಾನ್ಯ ಪೊಲೀಸ್ ಕುಟುಂಬದ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಪೊಲೀಸ್ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿಯೂ ಕೂಡ ಇತರೆ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com